ಹೊಸದಿಗಂತ ಡಿಜಿಟಲ್ ಡೆಸ್ಕ್:
ದಸರಾ ಹಾಗೂ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ 2300ಕ್ಕೂ ಹೆಚ್ಚು ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ಸಜ್ಜಾಗಿದೆ.
ರಾಜ್ಯದ ಹಾಗೂ ದೇಶದ ವಿವಿಧ ಭಾಗಗಳಿಂದ ಮೈಸೂರಿಗೆ ಆಗಮಿಸುವ ಪ್ರವಾಸಿಗರು ಮತ್ತು ಹಬ್ಬಕ್ಕೆ ಊರಿಗೆ ತೆರಳುವ ಸಾರ್ವಜನಿಕರಿಗಾಗಿ ಈ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ.
ದಸರಾ ಹಬ್ಬದ ರಜೆಗಳಿಗಾಗಿ ಸೆಪ್ಟೆಂಬರ್ 26, 27 ಮತ್ತು 30 ರಂದು ಬೆಂಗಳೂರಿನಿಂದ ರಾಜ್ಯ ಹಾಗೂ ಹೊರ ರಾಜ್ಯಗಳ ಪ್ರಮುಖ ಸ್ಥಳಗಳಿಗೆ 2300ಕ್ಕೂ ಹೆಚ್ಚು ವಿಶೇಷ ಬಸ್‌ಗಳು ಸಂಚರಿಸಲಿವೆ. ಈ ಬಸ್‌ಗಳು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ (ಸ್ಯಾಟಲೈಟ್ ಬಸ್ ನಿಲ್ದಾಣ) ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಹೊರಡಲಿವೆ.
ಅದೇ ರೀತಿ ಹಬ್ಬದ ನಂತರ, ಅಕ್ಟೋಬರ್ 2 ಮತ್ತು 5 ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಮರಳಲು ಕೂಡ ವಿಶೇಷ ಬಸ್‌ಗಳ ವ್ಯವಸ್ಥೆ ಇರಲಿದೆ.
ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪುಣೆ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ಈ ಬಸ್‌ಗಳು ಸಂಪರ್ಕ ಕಲ್ಪಿಸಲಿದ್ದು, ಅಲ್ಲಿಂದ ಬೆಂಗಳೂರಿಗೆ ವಾಪಸ್ ಬರಲು ಕೂಡ ಬಸ್‌ಗಳು ಇರಲಿವೆ.
ಮೈಸೂರು ದಸರಾಕ್ಕಾಗಿ 610 ವಿಶೇಷ ಬಸ್
ಇನ್ನು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕಾಗಿ ಒಟ್ಟು 610 ವಿಶೇಷ ಬಸ್‌ಗಳನ್ನು ಮೀಸಲಿಡಲಾಗಿದೆ. ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ 260 ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ.
ಇದಲ್ಲದೆ ಮೈಸೂರಿನ ಸುತ್ತಮುತ್ತಲಿನ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್. ಅಣೆಕಟ್ಟು, ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಹಾಗೂ ಮಡಿಕೇರಿ, ಚಾಮರಾಜನಗರ, ಹುಣಸೂರು ಮುಂತಾದ ಸ್ಥಳಗಳಿಗೆ 350 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.