Saturday, February 4, 2023

Latest Posts

ಶರಾವತಿ ಮುಳುಗಡೆ ಸಂತ್ರಸ್ತರ ಪರ ಲೋಕಸಭೆಯಲ್ಲಿ ದ್ವನಿಯಾದ ಸಂಸದ ರಾಘವೇಂದ್ರ!

ಹೊಸದಿಗಂತ ವರದಿ,ಶಿವಮೊಗ್ಗ: 

ಶರಾವತಿ ಮುಳುಗಡೆ ಸಂತ್ರಸ್ಥರ ಜಮೀನಿಗೆ ಹಕ್ಕಪತ್ರ ನೀಡಲು ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡುವಂತೆ  ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸುವ ಮೂಲಕ ಸಂಸದ ಬಿ. ವೈ. ರಾಘವೇಂದ್ರ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.
ಲೋಕಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಶರಾವತಿ ಜಲವಿದ್ಯುತ್ ಯೋಜನೆಯಲ್ಲಿ ನಿರಾಶ್ರಿತರಾದ ಸಾವಿರಾರು ಕುಟುಂಬಗಳು ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕನ್ನು ನೀಡುವ ಬಗ್ಗೆ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರ ಗಮನ ಸೆಳೆದರು.
ಮಲೆನಾಡಿನ 31 ವಿವಿಧ ಅರಣ್ಯ ಪ್ರದೇಶಗಳಲ್ಲಿನ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು ಶರಾವತಿ ಜಲವಿದ್ಯುತ್ ಯೋಜನೆಯಿಂದಾಗಿ ಮುಳುಗಡೆಯಾದ ಪ್ರದೇಶದಿಂದ ಸ್ಥಳಾಂತರಗೊಂಡ ಕುಟುಂಬಗಳಿಗೆ ಅವಕಾಶ ನೀಡಲಾಗಿತ್ತು. ಆದರೆ 1959ರಿಂದ ಕಂದಾಯ ದಾಖಲೆಗಳಲ್ಲಿ ರೈತರ ಹೆಸರು ನಮೂದಾಗಿಲ್ಲ. ಶಿವಮೊಗ್ಗ ಜಿಲ್ಲೆಯ ರೈತರು ಈಡಿಗ, ಇತರೆ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿದವರಾಗಿದ್ದು, ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದರು.
ಪ್ರಸ್ತುತ ಅಸ್ತಿತ್ವದಲ್ಲಿರುವ ಅರಣ್ಯ ಸಂರಕ್ಷಣಾ ಕಾಯಿದೆ-1980 ಕ್ಕಿಂತ ಮೊದಲು ಭೂಮಿಯನ್ನು ಡಿ-ನೋಟಿಫೈ ಮಾಡಬೇಕಾಗಿತ್ತು. ಆದರೆ ಆಗಿನ ಸರ್ಕಾರದ ನಿರ್ಲಕ್ಷದಿಂದ ಆಗಲಿಲ್ಲ. ಇದರಿಂದಾಗಿ ಈ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಥವಾ ಸರ್ಕಾರದ ಯಾವುದೇ ಯೋಜನೆಗಳಿಂದ ಯಾವುದೇ ಸವಲತ್ತುಗಳು ಸಿಗುತ್ತಿಲ್ಲ ಎಂದರು.
ಸಾವಿರಾರು ರೈತರ ಜಮೀನಿಗೆ ಹಕ್ಕುಪತ್ರ ನೀಡಬೇಕೆಂಬ ಬಹುದಿನಗಳ ಬೇಡಿಕೆ ಇಂದಿಗೂ ಈಡೇರಿಲ್ಲ.
ಅರಣ್ಯ ಸಂರಕ್ಷಣಾ ಕಾಯ್ದೆ-1980 ಜಾರಿಗೆ ಬಂದ ನಂತರ ಅರಣ್ಯ ಭೂಮಿಯ ಡಿ-ನೋಟಿಫಿಕೇಶನ್ ಅನ್ನು ಕೇಂದ್ರ ಸರ್ಕಾರ ಮಾತ್ರ ಮಾಡಬಹುದಾಗಿದೆ. ಈಗ ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರದಿಂದ ವಿವರವಾದ ಪ್ರಸ್ತಾವನೆ ಪಡೆದು ಭೂಮಿಯ ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಆ ರೈತರ ಜೀವನೋಪಾಯವನ್ನು ಉಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಶರಾವತಿ ಜಲವಿದ್ಯುತ್ ಯೋಜನೆಯ ಎಲ್ಲಾ ನಿರಾಶ್ರಿತ ಕುಟುಂಬಗಳಿಗೆ ಅರಣ್ಯ ಭೂಮಿ ಮಂಜೂರು ಮಾಡಲು ನಿಯಮಗಳಿಗೆ ಅಗತ್ಯ ತಿದ್ದುಪಡಿಗಳನ್ನು ಮಾಡಲು ಕ್ರಮ ಕೈಗೊಳ್ಳಲು ಮನವಿ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!