January18, 2026
Sunday, January 18, 2026
spot_img

ಇಡಿಯಿಂದ ಮಾಜಿ‌ ಸಚಿವ ಬಿ.ನಾಗೇಂದ್ರ‌ಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಬಿ.ನಾಗೇಂದ್ರ ಅವರ 8.07 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

ವಸತಿ ಮತ್ತು ವಾಣಿಜ್ಯ ಆಸ್ತಿ ಸೇರಿದಂತೆ 4 ಸ್ಥಿರಾಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್​ಗಳಡಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ. ಈ ಆಸ್ತಿಗಳನ್ನು ಪಿಎಂಎಲ್‌ಎ ಅಡಿ ‘ಅಪರಾಧದ ಆದಾಯ’ ಎಂದು ಇಡಿ ಕರೆದಿದೆ. ಅಪರಾಧದ ಉಳಿದ ಆದಾಯವನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಅವುಗಳಿಗೆ ಬಿ ನಾಗೇಂದ್ರ ಈಗಾಗಲೇ ಬೇರೆ ವ್ಯವಸ್ಥೆ ಮಾಡಿರಬಹುದು ಅಥವಾ ಮರೆಮಾಡಿರಬಹುದು ಎಂದು ಇಡಿ ತಿಳಿಸಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಖಾತೆಗಳಿಂದ ಕೋಟ್ಯಂತರ ರೂಪಾಯಿ ಹಣವನ್ನು ನಕಲಿ ಖಾತೆಗಳಿಗೆ ವರ್ಗಾವಣೆ ಮಾಡಲಾಗಿತ್ತು. ನಂತರ ಶೆಲ್ ಘಟಕಗಳ ಮೂಲಕ ಅಕ್ರಮವಾಗಿ ಇತರೆಡೆ ವರ್ಗಾಯಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ. ನಾಗೇಂದ್ರ ಅವರ ಸಂಬಂಧಿಕರು, ಆಪ್ತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಸೆಪ್ಟೆಂಬರ್​ ತಿಂಗಳಲ್ಲಿ ಶೋಧ ನಡೆಸಿದ್ದರು. ಕರ್ನಾಟಕ ಮತ್ತು ಆಂಧ್ರಪ್ರದೇಶದ ಸೇರಿದಂತೆ ಒಟ್ಟು 16 ಸ್ಥಳಗಳಲ್ಲಿ ಶೋಧ ನಡೆಸಿರುವ ಕುರಿತು ಸಿಬಿಐ ಮಾಹಿತಿ ನೀಡಿತ್ತು.

Must Read

error: Content is protected !!