ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್ ಆದ್ರೆ ಡೋಂಟ್ ವರಿ: ನಿಮಗಿದೆ ಮತ್ತೊಂದು ಚಾನ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದ್ದು, ಶೇ.73 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರ ನಡುವೆ ಬಾಕಿ ವಿದ್ಯಾರ್ಥಿಗಳ ಉತ್ತೀರ್ಣಗೊಳ್ಳಲು ಅನುಕೂಲ ಆಗುವಂತೆ ಪರೀಕ್ಷೆ-2 ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜೂ.7ರಿಂದ ಪರೀಕ್ಷೆಗಳು ಆರಂಭವಾಗಲಿವೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ವತಿಯಿಂದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆಸಲಾದ ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು 8,59,967 ವಿಧ್ಯಾರ್ಥಿಗಳು ಬರೆದಿದ್ದರು. ಇಂದು (ಮೇ 9) ಫಲಿತಾಂಶ ಪ್ರಕಟವಾಗಿದ್ದು, 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ರಾಜ್ಯದ ಶೇ.73 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆದರೆ, ಬಾಕಿ ಶೇ.27 ವಿದ್ಯಾರ್ಥಿಗಳು ಉತ್ತೀರ್ಣರಾಗಲು ಅನುಕೂಲ ಆಗುವಂತೆ ಪರೀಕ್ಷೆ-2ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜೂ.7ರಿಂದ ಜೂ.14ರವರೆಗೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದಿನಾಂಕ ವಿಷಯ ಸಮಯ
ಜೂ.7 ಕನ್ನಡ ಬೆಳಗ್ಗೆ 10.15
ಜೂ.8 ಹಿಂದಿ ಬೆಳಗ್ಗೆ 10.15
ಜೂ.10 ಗಣಿತ ಬೆಳಗ್ಗೆ 10.15
ಜೂ.12 ವಿಜ್ಞಾನ ಬೆಳಗ್ಗೆ 10.15
ಜೂ.13 ಇಂಗ್ಲೀಷ್ ಬೆಳಗ್ಗೆ 10.15
ಜೂ.14 ಸಮಾಜ ವಿಜ್ಞಾನ ಬೆಳಗ್ಗೆ 10.15

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಹೊರಡಿಸಲಾದ ಆದೇಶದಲ್ಲಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ದಿನಾಂಕ 07-06-2024 ರಿಂದ 14-06-2024 ರವರೆಗೆ ನಡೆಸಲು ತೀರ್ಮಾನಿಸಿ, ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯಂತೆ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ಧಗೊಳಿಸುವಂತೆ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ.

ಜಿಲ್ಲಾ ಉಪನಿರ್ದೇಶಕರು (ಆಡಳಿತ) ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್.ಎಸ್.ಎಲ್.ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseeb.karnataka.gov.in ದಿಂದ ಪಡೆದುಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಕ್ರಮವಹಿಸಲು ತಿಳಿಸಿದೆ.

ವಿಶೇಷ ಸೂಚನೆಗಳು:
ಪ್ರಥಮ ಭಾಷಾ ವಿಷಯಗಳು ಮತ್ತು ಐಚ್ಛಿಕ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.15ರವರೆಗೆ ಅವಧಿ ನಿಗದಿಪಡಿಸಿದೆ.

ಪ್ರಥಮ ಭಾಷಾ ವಿಷಯಗಳು ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3.00 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

ಎನ್.ಎಸ್.ಕ್ಯೂ.ಎಫ್. ವಿಷಯಗಳ ಪರೀಕ್ಷೆ ಬೆಳಗ್ಗೆ 10.15 ರಿಂದ 12.30ರವರೆಗೆ ನಡೆಯಲಿದೆ.

ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2.00 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!