ಹೊಸದಿಗಂತ ವರದಿ ಅಂಕೋಲಾ:
ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅಕ್ರಮ ಹಾಗೂ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕರೊಬ್ಬರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿ ತೀವ್ರ ವಿಚಾರಣೆ ನಡೆಸಿದ್ದಾರೆ.
ಕೆಲವು ತಿಂಗಳುಗಳ ಹಿಂದಷ್ಟೇ ತಾಲೂಕಿನ ಬೆಲೇಕೇರಿ ಪ್ರೌಢಶಾಲೆಗೆ ಮುಖ್ಯಾಧ್ಯಾಪಕರಾಗಿ ಆಗಮಿಸಿದ್ದ ವಿಜಯಪುರ ಮೂಲದ ಸಿಕಂದರ್ ಚೌದರಿ ಹಮಜಾಸಾಬ್ ಅವರ ವಂದಿಗೆಯಲ್ಲಿರುವ ವಾಸದ ಮನೆಯ ಮೇಲೆ ಐದು ಜನರನ್ನೊಳಗೊಂಡ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಪ್ರಕರಣದಲ್ಲಿ ಅವರ ಪಾತ್ರದ ಕುರಿತು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಹಣದ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಸಿಕಂದರ್ ಅವರು ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿ ಪ್ರತಿ ಅಭ್ಯರ್ಥಿಯಿಂದ ಸುಮಾರು ₹70 ಲಕ್ಷ ಹಣ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.
ಇದನ್ನೂ ಓದಿ:
ಈ ಪ್ರಕರಣವನ್ನು ಈ ಹಿಂದೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಈ ಸಂದರ್ಭದಲ್ಲಿ ಸಿಕಂದರ್ ಹಮಜಾಸಾಬ್ ಅವರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಲಾಗಿತ್ತು. ನಂತರ ಅವರು ಬೆಲೇಕೇರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾಗಿ ವರ್ಗಾವಣೆಯಾಗಿದ್ದರು.
ಇದೀಗ ಅಂಕೋಲಾ ತಾಲೂಕಿನ ವಂದಿಗೆಯಲ್ಲಿ ವಾಸವಾಗಿರುವ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವುದು ಪ್ರಕರಣದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.



