ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆರು ಮಂದಿ ಸಿಬ್ಬಂದಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
6 ಮಂದಿಗೂ ಒಂದೇ ದಿನ ಅಲ್ಲದೆ, ಬೇರೆ ಬೇರೆ ದಿನಾಂಕಗಳನ್ನು ನೀಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಬೆಂಗಳೂರಿನ ಇಡಿ ವಲಯ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ತಿಳಿದುಬಂದಿದೆ.
ಸಮನ್ಸ್ ಪಡೆದ 6 ಮಂದಿ ನೌಕರರು ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಮ್ಮೊಂದಿಗೆ ತರುವಂತೆ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಕಳೆದ ತಿಂಗಳು ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಇದರ ಬೆನ್ನಲ್ಲೇ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.