ಹೊಸದಿಗಂತ ಡಿಜಿಟಲ್ ಡೆಸ್ಕ್
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ, ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದೆ.
ಜೂನ್ 8 ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಕರೆದಿದೆ.ಇದೇ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರರಾದ ಅಭಿಷೇಕ್ ಮನು ಸಿಂಘ್ವಿ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಅವರು ಮರೆಮಾಚಲು ಏನೂ ಇಲ್ಲ. ಹೀಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ನಾವು ಬಿಜೆಪಿ ಈ ಸೇಡಿನ ರಾಜಕೀಯ ಮತ್ತು ಜಾರಿ ನಿರ್ದೇಶನಾಲಯದ ಯಾವುದೇ ಸಮನ್ಸ್ ಗೆ ಹೆದರುವುದಿಲ್ಲ. ಸೋನಿಯಾ ಗಾಂಧಿ ಜೂನ್ 8 ರಂದು ವಿಚಾರಣೆಗೆ ಹಾಜರಾಗಲಿದ್ದು, ರಾಹುಲ್ ಗಾಂಧಿ ಅವರಿಗೂ ಸಮನ್ಸ್ ನೀಡಲಾಗಿದೆ ಮತ್ತು ಅವರು ದೇಶದಲ್ಲಿ ಇಲ್ಲದ ಕಾರಣ ವಿಚಾರಣೆ ದಿನಾಂಕವನ್ನು ಜೂನ್ 5 ರ ನಂತರ ಮುಂದೂಡುವಂತೆ ತನಿಖಾ ಸಂಸ್ಥೆಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ನಾಯಕತ್ವವು ನಿರ್ಭೀತವಾಗಿದೆ ಮತ್ತು ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ಸಿದ್ಧವಾಗಿದೆ ಎಂದು ಅವರು ಹೇಳಿದರು.