ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆತಂಕಕಾರಿ ವರದಿಯ ಹಿನ್ನೆಲೆಯಲ್ಲಿ, ಪ್ರಮುಖ ಬ್ರ್ಯಾಂಡ್‌ಗಳ ಮೊಟ್ಟೆಗಳಲ್ಲಿ ‘AOZ’ (ನೈಟ್ರೋಫ್ಯುರಾನ್) ಎಂಬ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂಬ ವಾದವು ಮೊಟ್ಟೆ ಸೇವಿಸುವವರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಈ ವಾದವು ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ವಿಷಯದ ಗಂಭೀರತೆಯನ್ನು ಮನಗಂಡ ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಹಿಂದಿನ ಪರೀಕ್ಷೆಗಳಲ್ಲಿ ಮೊಟ್ಟೆಗಳಲ್ಲಿ ಯಾವುದೇ ಹಾನಿಕಾರಕ ಅಂಶಗಳು ಕಂಡುಬಂದಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಸಾರ್ವಜನಿಕರ ಆತಂಕ ಮತ್ತು ಹೊಸ ಆರೋಪಗಳ ಹಿನ್ನೆಲೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡದೆ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ತುರ್ತಾಗಿ ಸಂಗ್ರಹಿಸಿ, ಪ್ರಯೋಗಾಲಯಗಳಲ್ಲಿ ಕೂಲಂಕುಷ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಚಿವರು ಕಠಿಣ ನಿಲುವು ವ್ಯಕ್ತಪಡಿಸಿದ್ದು, “ಒಂದು ವೇಳೆ ಈ ಪರೀಕ್ಷೆಯಲ್ಲಿ ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಅಂತಹ ಉತ್ಪನ್ನಗಳನ್ನು ತಕ್ಷಣವೇ ನಿಷೇಧಿಸಲಾಗುವುದು,” ಎಂದು ಭರವಸೆ ನೀಡಿದ್ದಾರೆ. ಸಾರ್ವಜನಿಕರ ಆರೋಗ್ಯದ ಸುರಕ್ಷತೆಯೇ ಸರ್ಕಾರದ ಆದ್ಯತೆ ಎಂದು ಅವರು ತಿಳಿಸಿದ್ದಾರೆ. ಪರೀಕ್ಷಾ ವರದಿಗಳು ಶೀಘ್ರದಲ್ಲಿಯೇ ಹೊರಬೀಳುವ ನಿರೀಕ್ಷೆಯಿದೆ.

