ಲಾರಿಗೆ ಡಿಕ್ಕಿ ಹೊಡೆದ ಆಟೋ: 8 ವಿದ್ಯಾರ್ಥಿಗಳಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋವೊಂದು ವೇಗವಾಗಿ ಚಲಿಸಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಎಂಟು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ವಿಶಾಖಪಟ್ಟಣದ ಸಂಗಮ್​ ಸರತ್​ ಥಿಯೇಟರ್​ ಬಳಿಯ ಜಂಕ್ಷನ್​ನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಗೆ ವೇಗವಾಗಿ ಬಂದ ಆಟೋ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಆಗ ಆಟೋದಲ್ಲಿದ್ದ ವಿದ್ಯಾರ್ಥಿಗಳಲ್ಲಿ ಕೆಲವರು ರಸ್ತೆ ಮೇಲೆ ಬಿದ್ದಿದ್ದಾರೆ. ಇನ್ನೂ ಕೆಲವರು ಆಟೋದಲ್ಲೇ ಸಿಲುಕಿಕೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಮಕ್ಕಳ ರಕ್ಷಣೆ ಕಾರ್ಯ ನಡೆದಿದೆ.

ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದ ನಾಲ್ವರು ಮಕ್ಕಳಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ಉಳಿದ ಮಕ್ಕಳಿಗೆ ಚಿಕಿತ್ಸೆ ಮುಂದುವರಿದಿದೆ. ಅವರಲ್ಲಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಈ ಘಟನೆಯ ವಿಡಿಯೋ ಹತ್ತಿರದ ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!