ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳುಗಳೇ ಕಳೆದ ನಂತರವೂ ವಿಪಕ್ಷ ನಾಯಕ ಯಾರು ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.
ಆದರೆ ಇನ್ನೇನು ಕೆಲವೇ ದಿನಗಳಲ್ಲಿ ಈ ಪ್ರಶ್ನೆಗೆ ಉತ್ತರ ಸಿಗಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆಗಸ್ಟ್ 15ರ ನಂತರ ವಿಪಕ್ಷ ನಾಯಕರ ಆಯ್ಕೆ ಬಗೆಗಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ಸಂಸತ್ ಅಧಿವೇಶನದ ವೇಳೆ ವರಿಷ್ಠರನ್ನು ಭೇಟಿ ಮಾಡಲು ಬೊಮ್ಮಾಯಿ ದೆಹಲಿಗೆ ತೆರಳಿದ್ದರು. ಎರಡು ದಿನಗಳ ದೆಹಲಿ ಭೇಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಮುಂದಿನ ನಡೆ ಬಗ್ಗೆ ಚರ್ಚೆ ಮಾಡಿದ್ದಾರೆ.
ಈ ವೇಳೆ ಶೀಘ್ರವೇ ವಿಪಕ್ಷ ನಾಯಕರ ಆಯ್ಕೆ ಬಗ್ಗೆ ಮನವಿ ಮಾಡಿದ್ದು, ಆಗಸ್ಟ್ 15ರ ನಂತರ ಹೆಸರು ಹೊರಬೀಳುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ಸಿದ್ಧತೆ, ಸರ್ಕಾರದ ಬಗ್ಗೆ ಜನರ ಅಭಿಪ್ರಾಯ ಎಲ್ಲವನ್ನೂ ಸಂಗ್ರಹಿಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧವಾಗಲಿದೆ ಎಂದಿದ್ದಾರೆ.