ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಅಖಾಡ ಬಿರುಸು ಪಡೆದಿದ್ದು, ಅಲ್ಲಲ್ಲಿ ಅಕ್ರಮ ಸಾಗಾಟ ಬೆಳಕಿಗೆ ಬರುತ್ತಿದ್ದೆ. ಇದರ ನಡುವೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಿಂದ ಚುನಾವಣಾ ಅಕ್ರಮಗಳು ನಡೆಯುತ್ತಿದ್ದು, ಅರೆಸೇನಾ ಪಡೆ ತುಕಡಿ ನಿಯೋಜಿಸುವಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ.
ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಡೆಸುತ್ತಿರುವ ಅಕ್ರಮಗಳಿಗೆ ಮೌನ ಸಹಕಾರ ನೀಡುತ್ತಿರುವ ಈ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ಆಯೋಗವನ್ನು ಒತ್ತಾಯ ಮಾಡಿದರು.
ಕರ್ನಾಟಕದಲ್ಲಿ ಚುನಾವಣೆ ಆಯೋಗ ಇದೆಯಾ? ಕೇಂದ್ರ ಆಯೋಗ ಏನು ಮಾಡುತ್ತಿದೆ? ಚುನಾವಣೆ ಘೋಷಣೆಯಾದ ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎನ್ನುವುದು ಆಯೋಗಕ್ಕೆ ಗೊತ್ತಿಲ್ಲವೇ? ಆಯೋಗದ ಸಿಬ್ಬಂದಿ ಏನು ಮಾಡುತ್ತಿದ್ದಾರೆ? ಭಾನುವಾರ ರಾತ್ರಿ ಈ ಕ್ಷೇತ್ರದಲ್ಲಿ ಏನು ನಡೆದಿದೆ ಎನ್ನುವುದನ್ನು ನೀವು ನೋಡಬೇಕು ಎಂದು ಕಾಂಗ್ರೆಸ್‌ಅಭ್ಯರ್ಥಿ ಮತದಾರರಿಗೆ ಹಂಚಲು ಇರಿಸಲಾಗಿದ್ದ ಕುಕ್ಕರ್‌ಗಳ ಲೋಡ್ ಇದ್ದ ಲಾರಿಗಳ ಚಿತ್ರಗಳು, ವಿಡಿಯೋಗಳನ್ನು ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.
ಚುನಾವಣಾ ದಿನಾಂಕ ಘೋಷಣೆಯಾದ ದಿನದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳು ಮಿತಿಮೀರಿವೆ. ಮರಳವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯು ಮತದಾರರಿಗೆ ಹಂಚಲು ಇರಿಸಿದ್ದ ಕುಕ್ಕರ್‌ಗಳನ್ನು ಲೋಡ್ ಮಾಡಲಾಗಿದ್ದ ಎರಡು ಲಾರಿಗಳನ್ನು ಜೆಡಿಎಸ್ ಕಾರ್ಯಕರ್ತರು ಹಿಡಿದಿದ್ದಾರೆ. ಕೇವಲ ನೂರು ನಿಮಿಷದಲ್ಲಿ ಕ್ರಮ ಜರುಗಿಸಲಾಗುತ್ತದೆ ಎಂದಿದ್ದರು. ಈ ಅಕ್ರಮದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿ 48 ಗಂಟೆ ಕಳೆದಿದೆ. ಇನ್ನೂ ಕ್ರಮ ಆಗಿಲ್ಲ ಯಾಕೆ? ಎಂದು ಆಯೋಗವನ್ನು ಪ್ರಶ್ನಿಸಿದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣಾ ಆಕ್ರಮಗಳ ಕುರಿತು ದಾಖಲೆ ಸಮೇತ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.