ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕಾಲೇಜುಗಳು ಎದುರಿಸುತ್ತಿರುವ ಸವಾಲುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಉದ್ಯೋಗ ಆಧಾರಿತ ಉನ್ನತ ಶಿಕ್ಷಣವನ್ನು ಪರಿಚಯಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ನೂತನ ಸಭಾಂಗಣದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೋವಿಡ್-19 ಸಾಂಕ್ರಾಮಿಕದ ಬಳಿಕ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಉಂಟಾದ ಏರುಪೇರನ್ನು ಕಳೆದ ಎರಡು ವರ್ಷಗಳಲ್ಲಿ ಸರ್ಕಾರ ಪರಿಹರಿಸಿದೆ ಎಂದರು. 2024-25ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಅಕ್ಟೋಬರ್-ನವೆಂಬರ್‌ನಲ್ಲೇ ಪ್ರಕಟಿಸಲಾಗಿದ್ದು, ಸಿಇಟಿ ಪರೀಕ್ಷೆಯಿಂದ ಹಿಡಿದು ಕಾಲೇಜುಗಳ ಸಂಯೋಜನೆಯವರೆಗೆ ಎಲ್ಲವೂ ಸಮಯಕ್ಕೆ ಸರಿಯಾಗಿ ನಡೆಯುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಉದ್ಯೋಗ ಆಧಾರಿತ ಶಿಕ್ಷಣಕ್ಕೆ ಒತ್ತು, ಕಾಲೇಜು ಸಮಸ್ಯೆಗಳ ಪರಿಹಾರಕ್ಕೆ ಕ್ರಮ: ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಭರವಸೆ
