ಹೊಸದಿಗಂತ ವರದಿ ಮಡಿಕೇರಿ :
ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿದ್ದು, ಜನಪರ ಆಡಳಿತ ನೀಡಿವೆ. ಆದ್ದರಿಂದ ಜನಪರ ಕೆಲಸ ಮಾಡಿರುವ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಕರೆ ನೀಡಿದರು.
ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ಸಿದ್ದಾಪುರದ ಚರ್ಚ್ ಹಾಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಮಹಾಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸಿದ್ದು, ಜನಪರ ಆಡಳಿತ ನೀಡಿವೆ. ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿವೆ. ಕೊಡಗಿನಲ್ಲೂ ಗ್ರಾಮೀಣ ರಸ್ತೆ ಅಭಿವೃದ್ಧಿ ಸೇರಿದಂತೆ ಜಿಲ್ಲೆಯ ಪ್ರಗತಿ ಸಾಧ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎರಡೂ ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಬಿಜೆಪಿ ಮುಖಂಡ ಗಣೇಶ್ ಕಾರ್ಣಿಕ್ ಮಾತನಾಡಿ, ಸಂಕಷ್ಟದಲ್ಲಿರುವ ರೈತರ ಖಾತೆಗೆ ಕೇಂದ್ರ ಸರಕಾರ ಹಣ ಜಮೆ ಮಾಡಿದೆ. ಜನಪರ ಆಡಳಿತ ನೀಡಿದ ಬಿಜೆಪಿ ಜೊತೆ ನಾಡಿನ ಜನತೆ ಇದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯವನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಬೇಕು. ಟಿಪ್ಪು ಜಯಂತಿ ಆಚರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಕೊಡಗು ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಿದ್ದು, ಮುಂಬರುವ ಚುನಾವಣೆಯಲ್ಲಿ ಕೊಡಗಿನ ಜನರು ಇದಕ್ಕೆ ತಕ್ಕ ಉತ್ತರ ನೀಡಬೇಕು ಎಂದು ತಿಳಿಸಿದರು.
ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲಿರ ಚಲನ್, ಜಿಲ್ಲಾ ಉಪಾಧ್ಯಕ್ಷ ವಿ.ಕೆ.ಲೋಕೇಶ್, ರವಿ ಕುಶಾಲಪ್ಪ, ಸಿದ್ದಾಪುರ ಗ್ರಾ.ಪಂ ಅಧ್ಯಕ್ಷೆ ರೀನಾ ತುಳಸಿ, ತಾಲೂಕು ವಕ್ತಾರ ಅಜಿತ್ ಕರುಂಬಯ್ಯ, ಶಕ್ತಿಕೇಂದ್ರ ಅಧ್ಯಕ್ಷರಾದ ಪ್ರವೀಣ್, ಗಿರೀಶ್ ಮತ್ತಿತರರು ವೇದಿಕೆಯಲ್ಲಿದ್ದರು.
ಸಮಾವೇಶಕ್ಕೂ ಮೊದಲು ಪಟ್ಟಣದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು.