ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮತ್ತೆ ಗುಂಡಿನ ದಾಳಿ ನಡೆದಿದೆ.
ಪುಲ್ವಾಮಾದ ಲಾರೋ-ಪರಿಗಮ್ ಪ್ರದೇಶದಲ್ಲಿ ಎನ್ಕೌಂಟರ್ ಆರಂಭವಾಯಿತು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ರಾಜೌರಿ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಭಯೋತ್ಪಾದಕನನ್ನು ಹತ್ಯೆಗೈದ ಎರಡು ವಾರಗಳ ನಂತರ ಗುಂಡಿನ ಚಕಮಕಿ ನಡೆದಿದೆ.
ಆಗಸ್ಟ್ 5ರಂದು ನಡೆದ ಭಯೋತ್ಪಾದಕರೊಂದಿಗಿನ ಎನ್ಕೌಂಟರ್ನಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದರು. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸರ್ಚ್ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಗಾಯಗೊಂಡ ಮೂವರು ಯೋಧರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದರು. ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ಶೋಧ ಕಾರ್ಯವನ್ನು ವಿಸ್ತರಿಸಿವೆ.