Sunday, September 7, 2025

ಜಾರ್ಖಂಡ್‌ನಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ ಬಲಿಯಾದ ಮೋಸ್ಟ್ ವಾಂಟೆಡ್ ಮಾವೋವಾದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗೋಯಿಲ್‌ಕೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಬುರ್ಜುವಾ ಬೆಟ್ಟದಲ್ಲಿ ಭಾನುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಮೋಸ್ಟ್ ವಾಂಟೆಡ್ ಮಾವೋವಾದಿ ಹತ್ಯೆಯಾದ ಘಟನೆ ನಡೆದಿದೆ. ಹತ್ಯೆಯಾದ ವ್ಯಕ್ತಿ ಸಿಪಿಐ (ಮಾವೋವಾದಿ) ಸಂಘಟನೆಯ ಸ್ವಯಂ ಘೋಷಿತ ವಲಯ ಕಮಾಂಡರ್ ಅಮಿತ್ ಹನ್ಸ್ದಾ ಅಲಿಯಾಸ್ ಆಪ್ತಾನ್ ಎಂದು ಗುರುತಿಸಲಾಗಿದೆ.

ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಎನ್‌ಕೌಂಟರ್ ಬಳಿಕ ನಡೆದ ಶೋಧ ಕಾರ್ಯಾಚರಣೆಯಲ್ಲಿ ಶವ ಪತ್ತೆಯಾಗಿದ್ದು, ಮೃತ ಮಾವೋವಾದಿ ಅಮಿತ್ ಹನ್ಸ್ದಾ ಮೇಲೆ 10 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದ್ದು, ದಟ್ಟಾರಣ್ಯ ಪ್ರದೇಶದಲ್ಲಿ ತಪಾಸಣೆ ಕೈಗೊಳ್ಳಲಾಗಿದೆ.

ಚೈಬಾಸಾ ಪೊಲೀಸ್ ವರಿಷ್ಠಾಧಿಕಾರಿಗೆ, ಮಾವೋವಾದಿಗಳು ಆ ಪ್ರದೇಶದಲ್ಲಿ ನೆಲೆಸಿದ್ದಾರೆ ಎಂಬ ಖಚಿತ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಬೆಳಗ್ಗೆ 6 ಗಂಟೆಯ ಸುಮಾರಿಗೆ ಸ್ಥಳಕ್ಕೆ ತೆರಳಿದಾಗ ಗುಂಡಿನ ಚಕಮಕಿ ಆರಂಭವಾಯಿತು. ದಟ್ಟಾರಣ್ಯದೊಳಗೆ ಉಳಿದ ಮಾವೋವಾದಿಗಳು ಪರಾರಿಯಾಗಿದ್ದು, ಒಬ್ಬ ಮಾವೋವಾದಿಯ ಮೃತದೇಹ ಮಾತ್ರ ಪತ್ತೆಯಾಗಿದೆ.

ಅಮಿತ್ ಹನ್ಸ್ದಾ ಹಲವು ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಸಾವಿನಿಂದ ಸ್ಥಳೀಯ ಮಟ್ಟದಲ್ಲಿ ಮಾವೋವಾದಿಗಳ ಚಟುವಟಿಕೆಗಳಿಗೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ