ಜನಸ್ಪಂದನ ಕಾರ್ಯಕ್ರಮ ಮುಕ್ತಾಯ: 15 ದಿನದಲ್ಲಿ ಅರ್ಜಿ ಇತ್ಯರ್ಥ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಿಎಂ ಸಿದ್ದರಾಮಯ್ಯ ಅವರ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ಮುಕ್ತಾಯವಾಗಿದೆ.

ಬೆಳಗ್ಗೆ 9.30 ಗಂಟೆಗೆ ಪ್ರಾರಂಭವಾದ ಜನಸ್ಪಂದನ ಸಂಜೆ 5 ಗಂಟೆವರೆಗೆ ನಡೆಯಿತು. ಸಿಎಂ ಸಿದ್ದರಾಮಯ್ಯ ಜನರ ಅಹವಾಲು ಆಲಿಸಿ ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಸೂಚಿಸಿದರು.

ಇವತ್ತು ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎರಡು ತಿಂಗಳ ಹಿಂದೆಯೇ ಈ ಕಾರ್ಯಕ್ರಮ ನಡೆಯಬೇಕಾಗಿತ್ತು. ಎಲ್ಲ ಜಿಲ್ಲಾ ಸಚಿವರಿಗೆ ಪತ್ರ ಬರೆದಿದ್ದೆ; ಜಿಲ್ಲೆಗಳಲ್ಲಿ ಜನತಾ ಸ್ಪಂದನ ಕಾರ್ಯಕ್ರಮ ಮಾಡಿ ನನಗೆ ವರದಿ ಸಲ್ಲಿಸಬೇಕು ಎಂದು ತಿಳಿಸಲಾಗಿತ್ತು. ಕೆಲವು ಜಿಲ್ಲೆಗಳಿಂದ ಮಾತ್ರ ವರದಿ ಬಂದಿದೆ. ಉಳಿದ ಜಿಲ್ಲೆಗಳಿಂದ ವರದಿ ಬಂದಿಲ್ಲ. ಜನತಾ ಸ್ಪಂದನ – ಅನೇಕ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಥಳದಲ್ಲಿ ಪರಿಹಾರ ನೀಡಲು ಸಾಧ್ಯವಾಗುತ್ತದೆ. ಕೆಲವು ಅರ್ಜಿಗಳು ಕೂಡಲೇ ತೀರ್ಮಾನ ಮಾಡಲು ಆಗುವುದಿಲ್ಲ. ಸಮಯ ಬೇಕಾಗುತ್ತದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು. ಇಲ್ಲವಾದರೆ ಬೆಳೆಯುತ್ತಲೇ ಹೋಗುತ್ತವೆ ಎಂದರು.

ಇಂದು ಬಂದ ಅರ್ಜಿಗಳಲ್ಲಿ ಬಹುತೇಕ ಕಂದಾಯ, ಪೊಲೀಸ್‌ ಇಲಾಖೆ, ಗೃಹಲಕ್ಷ್ಮಿ ಯೋಜನೆ, ಬಿಬಿಎಂಪಿ, ಪಿಂಚಣಿ, ಗ್ರಾಚ್ಯುಟಿ ಇತ್ಯರ್ಥ, ವಸತಿ ಕೊಡಿ, ಉದ್ಯೋಗ ಕೊಡಿಸಿ ಎಂಬ ಮನವಿಗಳು ಬಂದಿವೆ. ವಿಶೇಷವಾಗಿ ಅಂಗವಿಕಲರು ಉದ್ಯೋಗ ಕೊಡಿಸಿ, ತ್ರಿಚಕ್ರ ವಾಹನ ಕೊಡಿಸಿ ಎಂದು ಮನವಿ ಸಲ್ಲಿಸಿದ್ದಾರೆ. ವಿಶೇಷವಾಗಿ ಜಿಲ್ಲಾಧಿಕಾರಿಗಳು ಸ್ಥಳೀಯವಾಗಿಯೇ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ.

ಇಲ್ಲಿ ಖಾತೆ, ಪಹಣಿ, ಪೋಡಿ ಮಾಡಲು ನನ್ನ ಬಳಿ ಬರಬೇಕಾ?. ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ಕೆಲಸ ಮಾಡಿದರೆ ಜನರು ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಸಿಎಂ ಹೇಳಿದರು.

ಅರ್ಜಿ ಇತ್ಯರ್ಥಕ್ಕೆ 15 ದಿನಗಳ ಗಡುವು:
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಸ್ಪತ್ರೆ, ಪೊಲೀಸ್‌ ಠಾಣೆ, ಹಾಸ್ಟೆಲ್​ಗಳು ಮತ್ತಿತರ ಸ್ಥಳಗಳಿಗೆ ಭೇಟಿ ನೀಡಬೇಕು. ಜನರ ಸಮಸ್ಯೆ ಬಗೆಹರಿಸಬೇಕು. ವಿಳಂಬ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ಕೂಡಲೇ ಜನರಿಗೆ ಸ್ಪಂದಿಸಲು ಸೂಚಿಸಿದರು. ಕಾನೂನು ರೀತ್ಯ ಮಾಡಲು ಸಾಧ್ಯವಾಗದಿದ್ದರೆ, ಹಿಂಬರಹ ನೀಡಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

ಇಂದು ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುವುದು. ಹದಿನೈದು ದಿನದೊಳಗೆ ಇವುಗಳನ್ನು ವಿಲೇವಾರಿ ಮಾಡಬೇಕು. ನಿಯಮಾವಳಿಗಳಡಿ ಅವಕಾಶವಿಲ್ಲದೇ ಇದ್ದರೆ, ಅರ್ಜಿದಾರರಿಗೆ ಹಿಂಬರಹ ಬರೆದು ಕಳುಹಿಸಿ. ಕೆಳಹಂತದ ಅಧಿಕಾರಿಗಳಿಗೆ ನೀವು ಕೂಡಲೇ ಸ್ಪಂದಿಸಬೇಕು ಎಂದು ತಿಳಿಸಿದರು.

ಮೂರು ತಿಂಗಳಿಗೊಮ್ಮೆ ನಾನು ಜನಸ್ಪಂದನ ಮಾಡುತ್ತೇನೆ. ಮುಂದಿನ ಮೂರು ತಿಂಗಳು ಮಾಡುವ ಜನಸ್ಪಂದನೆಯಲ್ಲಿ ಇಷ್ಟು ಅರ್ಜಿಗಳು ಬರಬಾರದು. ಹೆಚ್ಚು ಜನ ಬಂದರೆ ತಳ ಹಂತದ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ ಎಂದು ಅರ್ಥ ಎಂದರು.

ಇಂದು ಮೂರುವರೆ ಸಾವಿರ ಅರ್ಜಿ ಸ್ವೀಕರಿಸಲಾಗಿದೆ. ಇವುಗಳನ್ನು ಪರಿಶೀಲಿಸಿ, ಕಾನೂನು ರೀತ್ಯ ಪರಿಹಾರ ನೀಡಬೇಕು. ಸಾಧ್ಯವಾಗದಿದ್ದರೆ ಹಿಂಬರಹ ನೀಡಬೇಕು. ತಳಹಂತದ ಅಧಿಕಾರಿಗಳು ಅರ್ಜಿಯನ್ನು ಇತ್ಯರ್ಥಪಡಿಸಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ಮುಖ್ಯಮಂತ್ರಿ ಕಚೇರಿಗೆ ಮಾಹಿತಿ ನೀಡಬೇಕು. ಹಗುರವಾಗಿ ತೆಗೆದುಕೊಳ್ಳಬೇಡಿ. ಲಘುವಾಗಿ ತೆಗೆದುಕೊಂಡರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!