ಟೀಂ ಇಂಡಿಯಾ ಸ್ಪಿನ್ನರ್‌ಗಳ ದಾಳಿಗೆ ಎಡವಿದ ಇಂಗ್ಲೆಂಡ್: ಸಾಧಾರಣ ಮೊತ್ತಕ್ಕೆ ಆಲೌಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾ ಸ್ಪಿನ್ನರ್‌ಗಳ ಮಾರಕ ದಾಳಿಗೆ ಇಂಗ್ಲೆಂಡ್ 5ನೇ ಹಾಗೂ ಕೊನೆಯ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ 218 ರನ್‌ಗಳ ಸಾಧಾರಣ ಮೊತ್ತಕ್ಕೆ ಸರ್ವಪತನ ಕಂಡಿದೆ.

ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ದೊಡ್ಡ ಮೊತ್ತ ಕಲೆಹಾಕುವ ನಿರೀಕ್ಷೆಯೊಂದಿಗೆ ಕಣಕ್ಕಿಳಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕರಾದ ಬೆನ್ ಡಕೆಟ್ ಹಾಗೂ ಜಾಕ್ ಕ್ರಾಲಿ ಮೊದಲ ವಿಕೆಟ್‌ಗೆ 64 ರನ್‌ಗಳ ಜತೆಯಾಟವಾಡಿದರು. ಆದರೆ ಈ ಜೋಡಿ ಬೇರ್ಪಡುತ್ತಿದ್ದಂತೆಯೇ ಇಂಗ್ಲೆಂಡ್ ತಂಡವು ಕುಲ್ದೀಪ್ ಯಾದವ್ ಮಾರಕ ದಾಳಿಗೆ ತತ್ತರಿಸಿ ಹೋಯಿತು.

ಇಂಗ್ಲೆಂಡ್ ಅಗ್ರಕ್ರಮಾಂಕದ ಬ್ಯಾಟರ್‌ಗಳಾದ ಜಾಕ್ ಕ್ರಾಲಿ, ಓಲಿ ಪೋಪ್, ಜಾನಿ ಬೇರ್‌ಸ್ಟೋವ್, ಹಾಗೂ ಬೆನ್ ಸ್ಟೋಕ್ಸ್ ಅವರನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಈ ಮೂಲಕ 5 ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್ ಬ್ಯಾಟಿಂಗ್ ಬೆನ್ನೆಲುಬನ್ನೇ ಮುರಿಯುವಲ್ಲಿ ಯಶಸ್ವಿಯಾದರು. ಕುಲ್ದೀಪ್ ಯಾದವ್ 15 ಓವರ್ ಬೌಲಿಂಗ್ ಮಾಡಿ 72 ರನ್ ನೀಡಿ 5 ವಿಕೆಟ್ ಕಬಳಿಸಿದರು.

ಇನ್ನು ಟೆಸ್ಟ್ ವೃತ್ತಿಜೀವನದ 100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್‌ನ ನಾಲ್ವರು ಬ್ಯಾಟರ್‌ಗಳನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಅಶ್ವಿನ್ ಕೇವಲ 51 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ನೂರನೇ ಟೆಸ್ಟ್ ಪಂದ್ಯವನ್ನು ಮತ್ತಷ್ಟು ಸ್ಮರಣೀಯವಾಗಿಸಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!