ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಖಾತೆ ಸಚಿವ ಸಿ.ಆರ್. ಪಾಟೀಲ್ ಅವರನ್ನು ದೆಹಲಿಯಲ್ಲಿಂದು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಈ ವೇಳೆ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಸೇರಿದಂತೆ ಜಲಶಕ್ತಿ ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದ ಬಾಕಿ ನೀರಾವರಿ ಯೋಜನೆಗಳಿಗೆ ಅನುಮತಿ ನೀಡುವುದು ಸೇರಿದಂತೆ ಜಲಶಕ್ತಿ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಚಿವರೊಂದಿಗೆ ಸಮಾಲೋಚಿಸಿದರು.ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರನ್ನು ಭೇಟಿ ಮಾಡಿ, ಬಾಕಿ ಉಳಿದಿರುವ ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುಮತಿ ಕೊಡಿಸಲು ಸಹಕಾರ ನೀಡುವಂತೆ ಮನವಿ ಮಾಡಿದರು. ಇದಕ್ಕೂ ಮುನ್ನ ರಾಜ್ಯದಲ್ಲಿ ಬಾಕಿ ಇರುವ ಯೋಜನೆಗಳಿಗೆ ಪರಿಸರ ಅನುಮತಿ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೆಹಲಿಯಲ್ಲಿಂದು ಕೇಂದ್ರ ಅರಣ್ಯ, ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬಳಿಕ ಡಿ.ಕೆ. ಶಿವಕುಮಾರ್, ಎತ್ತಿನಹೊಳೆ ಯೋಜನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅರಣ್ಯ ಹಾಗೂ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ, ಮನವಿ ಮಾಡಲಾಗಿದೆ. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.