Saturday, July 2, 2022

Latest Posts

ಇಎಸ್ ಐ ಆಸ್ಪತ್ರೆ ನಿರ್ಮಾಣಕ್ಕೆ ಚಿಂತನೆ: ಶಾಸಕ ಎ. ಮಂಜುನಾಥ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………

ಹೊಸ ದಿಗಂತ ವರದಿ, ರಾಮನಗರ:

ಕೇತಗಾನಹಳ್ಳಿ ರಸ್ತೆಯ ಹೌಸಿಂಗ್ ಬೋರ್ಡ್ ಮೈದಾನದಲ್ಲಿ ಕಾರ್ಮಿಕ ಇಲಾಖೆಯಿಂದ ಏರ್ಪಡಿಸಿದ್ದ ಕಟ್ಟಡ ಮತ್ತು ಕೂಲಿ ಕಾರ್ಮಿಕರಿಗೆ ಆಹಾರ ಕಿಟ್‌ ವಿತರಿಸುವ ಕಾರ್ಯಕ್ರಮವನ್ನು ಶಾಸಕ ಎ. ಮಂಜುನಾಥ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಕೈಗಾರಿಕಾ ಪ್ರದೇಶಗಳ ನಡುವೆ ಸುಸಜ್ಜಿತ ಇ.ಎಸ್.ಐ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ. ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬಿಡದಿ-ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಆಸ್ಪತ್ರೆ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಇದಕ್ಕೆ ಸರ್ಕಾರದಿಂದಲೇ ₹ 100 ಕೋಟಿ ಅನುದಾನ ಸಿಗಲಿದೆ ಎಂದು ತಿಳಿಸಿದರು.
ಉಪ ಮುಖ್ಯಮಂತ್ರಿ ಡಾ‌.ಸಿ.ಎನ್. ಅಶ್ವತ್ಥನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.
ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದೇನೆ. ಕೇಂದ್ರ ಸರ್ಕಾರದಿಂದ ಕಾರ್ಮಿಕರಿಗಾಗಿ ಇ.ಎಸ್.ಐ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಅನುಮೋದನೆ ಕೊಡಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.
ಪ್ರಸ್ತುತ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯಗಳಿಲ್ಲದ ಕಾರಣ ತುರ್ತು ಸನ್ನಿವೇಶದಲ್ಲಿ ಸರಿಯಾದ ಚಿಕಿತ್ಸೆ ದೊರಕುತ್ತಿಲ್ಲ. ರೋಗಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದು ಅನಿವಾರ್ಯವಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿಂದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಬಿಡದಿ ಹಾಗೂ ಸುತ್ತಮುತ್ತಲಿನ ಲಕ್ಷಾಂತರ ಕಾರ್ಮಿಕರಿಗೆ ಹಾಗೂ ಅವರ ಕುಟುಂಬಗಳ ಅವಲಂಬಿತ ಸದಸ್ಯರಿಗೆ ಇ.ಎಸ್.ಐ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಯೋಜನ ದೊರೆಯಲಿದೆ. ಹೀಗಾಗಿ ಶೀಘ್ರವೇ ಆಸ್ಪತ್ರೆಗೆ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.
ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಹಾಗೂ ವಿವಿಧ ವೃತ್ತಿಯಲ್ಲಿರುವ ಕಾರ್ಮಿಕರಿಗೆ ಬೆನ್ನೆಲುಬಾಗಿ ಸರ್ಕಾರ ಕೆಲಸ ಮಾಡುತ್ತಿದೆ. ಈಗಾಗಲೇ, ಸರ್ಕಾರದಿಂದ ಮಾಗಡಿ ಕ್ಷೇತ್ರದ ಕಾರ್ಮಿಕರಿಗೆ ಐದು ಸಾವಿರ ಆಹಾರ ಕಿಟ್‌ ಬಂದಿವೆ. ಇನ್ನೂ ಹೆಚ್ಚಿನ ಕಿಟ್ ಪೂರೈಸುವ ಭರವಸೆಯನ್ನು ಕಾರ್ಮಿಕ ಸಚಿವರು ನೀಡಿದ್ದಾರೆ ಎಂದು ಹೇಳಿದರು.
ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯ ಸಿಗಲಿವೆ. ಆದ್ದರಿಂದ ಕಾರ್ಮಿಕರು ಕಡ್ಡಾಯವಾಗಿ ಹೆಸರು ನೋಂದಣಿ ಮಾಡಿಕೊಂಡು ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇಲಾಖೆಯ ಅಧಿಕಾರಿಗಳು ಪಂಚಾಯಿತಿವಾರು ಕಾರ್ಮಿಕರ ನೋಂದಣಿ ಕುರಿತು ಪ್ರಚಾರ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss