ಹೊಸದಿಗಂತ ವರದಿ ಬೆಳಗಾವಿ:
ಎಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳ ಎಂಜಿನ್ಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಳ್ಳುತ್ತಿದೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಇಂಧನದ ಗುಣಮಟ್ಟ ಪರಿಶೀಲನೆಗೆ ಮುಂದಾಗಿದೆ. ನಗರದ ಮೂರು ಪೆಟ್ರೋಲ್ ಬಂಕ್ಗಳಿಂದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳ ಕಾರ್ಯಕ್ಷಮತೆ ಕುಸಿಯುತ್ತಿದ್ದು, ಕೆಲವು ವಾಹನಗಳ ಎಂಜಿನ್‌ಗಳು ಹಾನಿಗೊಳಗಾಗುತ್ತಿವೆ ಎಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಪರಿಶೀಲನೆ ಆರಂಭಿಸಲಾಗಿದೆ ಎಂದರು.
ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಪೂರೈಸುವ ಇಂಧನವು ಸರ್ಕಾರ ನಿಗದಿಪಡಿಸಿರುವ ಗುಣಮಟ್ಟ ಹಾಗೂ ತಾಂತ್ರಿಕ ಮಾನದಂಡಗಳಿಗೆ ಅನುಗುಣವಾಗಿರಬೇಕು. ಗ್ರಾಹಕರಿಗೆ ಗುಣಮಟ್ಟದ ಇಂಧನ ಪೂರೈಸುವುದು ಕಂಪನಿಗಳು ಮತ್ತು ಪೆಟ್ರೋಲ್ ಬಂಕ್‌ಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ:
ಅಧಿಕಾರಿಗಳು ಸಂಗ್ರಹಿಸಿರುವ ಮೂರು ಮಾದರಿಗಳನ್ನು ಅಧಿಕೃತ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಇಂಧನದ ಗುಣಮಟ್ಟ ಹಾಗೂ ಎಥನಾಲ್ ಮಿಶ್ರಣದ ಪ್ರಮಾಣದ ಕುರಿತು ಪರೀಕ್ಷೆ ನಡೆಯಲಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ನಿಗದಿತ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟ ಪೆಟ್ರೋಲ್ ಬಂಕ್‌ಗಳ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.



