ಈ ಬಾರಿಯೂ ಶಿಕ್ಷಕರು ನನ್ನ ಕೈ ಹಿಡಿಯುತ್ತಾರೆ: ವೈ.ಎ.ನಾರಾಯಣಸ್ವಾಮಿ ವಿಶ್ವಾಸ

ಹೊಸದಿಗಂತ ವರದಿ, ಚಿತ್ರದುರ್ಗ:

ಕಳೆದ ೧೮ ವರ್ಷದಿಂದ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ, ಶಿಕ್ಷಕರ ಧ್ವನಿಯಾಗಿರುವ ನನ್ನನ್ನು ಶಿಕ್ಷಕರು ಕಳೆದುಕೊಳ್ಳಲು ಇಷ್ಟಪಡುವುದಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಶಿಕ್ಷಕ ಮತದಾರರು ನನ್ನನ್ನು ಗೆಲ್ಲಿಸುತ್ತಾರೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಮೈತ್ರಿ ಕೂಟದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿನ ಮತಕೇಂದ್ರಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಳೆದ ೧೮ ವರ್ಷ ಶಿಕ್ಷಕರ ಸೇವೆ ಮಾಡಿದ್ದೇನೆ. ಅವರ ವಿವಿಧ ರೀತಿಯ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ ಎಂದರು.

ಅಲ್ಲದೇ ಸ್ವಾತಂತ್ರ್ಯ ಬಂದಾಗಿನಿಂದಲೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಸಹ ಈ ಕ್ಷೇತ್ರ ಎನ್.ಡಿ.ಎ. ಮೈತ್ರಿ ಕೂಟದ ಅಭ್ಯರ್ಥಿಯ ಪಾಲಾಗಲಿದೆ. ಕಳೆದ ಮೂರು ಚುನಾವಣೆಗಿಂತಲೂ ಈ ಚುನಾವಣೆಯಲ್ಲಿ ಅಧಿಕ ಮತಗಳಿಂದ ಮತದಾರರು ನನ್ನನ್ನು ಜಯಶಾಲಿಯನ್ನಾಗಿ ಮಾಡುತ್ತಾರೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ದೇಶದಲ್ಲಿ ಎನ್.ಇ.ಪಿ. ಜಾರಿ ಮಾಡಲು ಹೊರಟಿದೆ. ಇದರಿಂದ ಈಗ ಅಲ್ಲದಿದ್ದರೂ ನಮ್ಮ ಮುಂದಿನ ಪೀಳಿಗೆಗೆ ಇದರ ಪ್ರಯೋಜನ ದೊರಕಲಿದೆ. ಅದರೆ ರಾಜ್ಯ ಸರ್ಕಾರ ಇದನ್ನು ವಿರೋಧಿಸುತ್ತಿದೆ. ಇದರ ಬದಲಿಗೆ ಎಸ್.ಇ.ಪಿ. ಜಾರಿ ಮಾಡಲು ಮುಂದಾಗಿದೆ. ಕಾಂಗ್ರೆಸ್ ಸರ್ಕಾರ ತಪ್ಪು ನಿರ್ಧಾರಗಳನ್ನು ಕೈಗೊಂಡು ಕಾನೂನುಗಳನ್ನು ಮಾಡಿ ಪರಿಷತ್‌ಗೆ ಕಳುಹಿಸುತ್ತಾರೆ. ಇಲ್ಲಿ ನಮ್ಮ ಬಿಜೆಪಿಯ ಸಂಖ್ಯೆ ಹೆಚ್ಚಾಗಿದ್ದರೆ ಅದನ್ನು ಪರಿಶೀಲಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಜಾರಿ ಮಾಡಿದ ಕಾನೂನುಗಳು ಸರಿಯಾಗಿದ್ದರೆ ಪಾಸು ಮಾಡಬಹುದು. ಆದರೆ ಕೆಲವೊಮ್ಮೆ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಾಗ ಅದನ್ನು ತಿರಸ್ಕರಿಸಬಹುದು. ಇದಕ್ಕೆ ನಮ್ಮ ಸಂಖ್ಯಾಬಲ ಹೆಚ್ಚಾಗಿರಬೇಕು. ಇದರ ಬದಲು ಕಾಂಗ್ರೆಸ್ ಪಕ್ಷದ ಸಂಖ್ಯಾಬಲ ಹೆಚ್ಚಾಗಿದ್ದರೆ ಕಾನೂನಿನಲ್ಲಿ ತಪ್ಪಿದ್ದರೂ ಅದು ಪಾಸಾಗುತ್ತದೆ. ಇದರಿಂದ ಮುಂದೆ ಮಕ್ಕಳು ಮತ್ತು ಶಿಕ್ಷಕರಿಗೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ನಿಮ್ಮ ಸಹಾಯ ಅಗತ್ಯವಿದೆ ಎಂದರು.

ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳರವರು ಮಾತನಾಡಿ, ಈ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ನಮ್ಮ ಕೈ ಹಿಡಿಯುತ್ತಾರೆ ಎಂಬ ನಂಬಿಕೆ ಇದೆ. ಅಲ್ಲದೇ ನಾರಾಯಣಸ್ವಾಮಿಯವರು ಸಹ ಕಳೆದ ೧೮ ವರ್ಷದಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಹಾಗಾಗಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಅವರಿಗೆ ಅರಿವಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಗೆಲ್ಲಿಸಿದರೆ ಮುಂದೆ ಶಿಕ್ಷಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಎಸ್.ಸಿ. ಮೋರ್ಚಾದ ರಾಜ್ಯ ಕಾರ್ಯದರ್ಶಿ ಉಮೇಶ್ ಕಾರಜೋಳ, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರೆಡ್ಡಿ, ವಕ್ತಾರರಾದ ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್, ನಗರಾಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ಮಂಜುಳಮ್ಮ, ಬಸಮ್ಮ, ಅರುಣ ಸೇರಿದಂತೆ ಇತರರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!