July 25, 2026
Saturday, July 25, 2026
spot_img

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದರೂ ಮುಗಿಯದ ಧರಣಿ; ಇನ್ನು 3 ಬಾಕಿ ಬೇಡಿಕೆ ಮುಂದಿಟ್ಟ CJP!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್-ಯುಜಿ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ, ತೀವ್ರ ರಾಜಕೀಯ ಒತ್ತಡಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಂದು ಶನಿವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಆದರೆ, ಸಚಿವರ ರಾಜೀನಾಮೆಯಿಂದ ಮಾತ್ರವೇ ನಮ್ಮ ಹೋರಾಟ ಮುಗಿಯುವುದಿಲ್ಲ, ಇನ್ನುಳಿದ 3 ಪ್ರಮುಖ ಬೇಡಿಕೆಗಳು ಈಡೇರುವವರೆಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆ ಮುಂದುವರಿಯಲಿದೆ ಎಂದು ಕಾಕ್‌ರೋಚ್ ಜನತಾ ಪಾರ್ಟಿ (CJP) ಘೋಷಿಸಿದೆ.

ಈ ಕುರಿತು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಅಪ್‌ಡೇಟ್ ಹಂಚಿಕೊಂಡಿರುವ ಸಿಜೆಪಿ, ತನ್ನ ಪ್ರಮುಖ ಬೇಡಿಕೆಗಳ ಪಟ್ಟಿಯನ್ನು ಪುನರುಚ್ಚರಿಸಿದೆ. “ಇಡೀ ದೇಶ ಮತ್ತು ಜಂತರ್ ಮಂತರ್ ಇನ್ನುಳಿದ ಬೇಡಿಕೆಗಳ ಈಡೇರಿಕೆಗೆ ಕಾಯುತ್ತಿದೆ” ಎಂದು ಪಕ್ಷ ಹೇಳಿದೆ.

ಸಿಜೆಪಿ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳು:

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: (ಈಗಾಗಲೇ ಪೂರ್ಣಗೊಂಡಿದೆ)

ನೀಟ್ ಹಗರಣದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎಲ್ಲಾ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಆರ್ಥಿಕ ನೆರವು ನೀಡಬೇಕು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಯಾವುದೇ ವಿದ್ಯಾರ್ಥಿಗಳ ವಿರುದ್ಧ ಯಾವುದೇ ರೀತಿಯ ಶಿಸ್ತು ಅಥವಾ ಕಾನೂನು ಕ್ರಮ ಜರುಗಿಸಬಾರದು.

ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ ದೆಹಲಿ ಪೊಲೀಸ್ ಮತ್ತು ಆರ್‌ಎಎಫ್ (RAF) ಪಡೆಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂಬ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದೆ.

ಇದನ್ನೂ ಓದಿ:

ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ:

ಇದೇ ವೇಳೆ, ಜೂನ್ 28 ರಿಂದ ಸತತ 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಖ್ಯಾತ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಈ ವಾರ ತಮ್ಮ ಮುಷ್ಕರವನ್ನು ಕೊನೆಗೊಳಿಸಿದ್ದಾರೆ. ಶಾಂತಿಯುತ ಪ್ರತಿಭಟನಾಕಾರರಿಗೆ ರಕ್ಷಣೆ ನೀಡುವುದು, ಪರೀಕ್ಷಾ ವ್ಯವಸ್ಥೆಯ ಸುಧಾರಣೆ ಹಾಗೂ ಜವಾಬ್ದಾರಿಯ ಕುರಿತು ಸಂಸತ್ತಿನಲ್ಲಿ ಚರ್ಚಿಸುವುದು ಮತ್ತು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಆರ್ಥಿಕ ಸಹಾಯ ಒದಗಿಸುವ ಬಗ್ಗೆ ಕೇಂದ್ರ ಸರ್ಕಾರವು ಲಿಖಿತ ಭರವಸೆ ನೀಡಿದ ಬಳಿಕ ಅವರು ಉಪವಾಸ ಕೈಬಿಟ್ಟಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !