ಕಾಸಿಗಾಗಿ ಪೋಸ್ಟಿಂಗ್ ಇದು ಕಾಂಗ್ರೆಸ್‌ನ 6ನೇ ಗ್ಯಾರಂಟಿ: ಹೆಚ್‌.ಡಿ ಕುಮಾರಸ್ವಾಮಿ ಟೀಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್‌ ಕೊಟ್ಟ ಗ್ಯಾರಂಟಿ ಘೋಷಣೆಗಳ ಕುರಿತು ಸರಣಿ ಟ್ವೀಟ್‌ ಗಳ ಮೂಲಕ ರಾಜ್ಯ ಸರ್ಕಾರ ವಿರುದ್ದ ಕಿಡಿಕಾರಿದ್ದಾರೆ.

ಈ ಕುರಿತು ಬುಧವಾರ ಸರಣಿ ಟ್ವೀಟ್‌ ಮಾಡಿರುವ ಅವರು, ಪಂಚಗ್ಯಾರಂಟಿಗಳ ಕಾಂಗ್ರೆಸ್‌ ಸರಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್!!ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ ಎಂದು ಆರೋಪಿಸಿದ್ದಾರೆ.

ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ @CMofKarnataka ವೋ ಅಥವಾ Corruption of Karnataka ವೋ?? ಎಂದು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ ಎಂದಿದ್ದಾರೆ.

ಈ ಕಾಂಗ್ರೆಸ್‌ ಸರಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!