ಸುವರ್ಣಸೌಧದಲ್ಲಿ ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ತಿದ್ದುಪಡಿ ವಿಧೇಯಕ ಮಂಡನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ – ವಿಧಾನ ಸಭೆಯಲ್ಲಿ ತಿದ್ದುಪಡಿ ವಿಧೇಯಕವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಡಿಸಿದರು.

ಇಂದು ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ಮಸೂದೆಯಾಗಿದೆ.
ಈ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ಕಡ್ಡಾಯ ಗ್ರಾಮೀಣ ಸೇವಾ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನ ಸಭೆಯಲ್ಲಿ ತಿದ್ದುಪಡಿ ವಿಧೇಯಕವನ್ನ ಮಂಡಿಸಿದ್ದಾರೆ.‌

‘ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆ’ ಎಂಬ ಪದಗಳ ಮೊದಲಿಗೆ ‘ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಲಾದಂತೆ ಅಸ್ತಿತ್ವದಲ್ಲಿರುವ ಖಾಲಿಹುದ್ದೆಗಳಲ್ಲಿ’ ಎಂಬ ಪದಗಳನ್ನ ಸೇರಿಸುವ ಮೂಲಕ ತಿದ್ದುಪಡಿ ತರಲಾಗುತ್ತಿದೆ. ಈ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವೈದ್ಯರ ಕಡ್ಡಾಯ ಸೇವೆಯನ್ನು ಬಳಸಿಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ.

ಈ ಹಿಂದೆ ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆ ಜಾರಿಗೆ ತಂದ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇತ್ತು. ಹೀಗಾಗಿ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದವರು, ಒಂದು ವರ್ಷ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿ ಸರ್ಟಿಫಿಕೇಟ್ ಪಡೆಯಬೇಕು ಎಂಬ ನೀತಿಯನ್ನು ಸರ್ಕಾರ ಅನುಸರಿಸಿತ್ತು. ಆದರೆ ಇತ್ತೆಚೆಗೆ ವೈದ್ಯಕೀಯ ಸ್ನಾತಕೋತ್ತರ ಹಾಗೂ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ತಿರ್ಣರಾಗಿ ಹೊರಬರುತ್ತಿರುವುದರಿಂದ, ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವೈದ್ಯರ ಕಡ್ಡಾಯ ಒಂದು ವರ್ಷದ ಸೇವೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಕಡ್ಡಾಯ ಸೇವೆಯಡಿ ಕಾರ್ಯನಿರ್ವಹಿಸುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ಟೈಪಂಡ್ ಅನ್ನ ರಾಜ್ಯ ಸರ್ಕಾರವೇ ನಿರ್ಧರಿಸುವ ಅಧಿಕಾರ ಹೊಂದಿದೆ. ಅಲ್ಲದೇ ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ ನೀಡಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ. ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಗೆ 3,000ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಆದರೆ, ಖಾಲಿ ಹುದ್ದೆಗಳ ಸಂಖ್ಯೆ 1,900 ಇದ್ದು, ತಿದ್ದುಪಡಿ ವಿಧೇಯಕದ ಮೂಲಕ ಕಡ್ಡಾಯ ಸೇವೆ ಖಾಲಿ ಹುದ್ದುಗಳಿಗೆ ಸೀಮಿತಗೊಳ್ಳಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!