ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೊರೊನಾ ನಿಯಂತ್ರಣಕ್ಕಾಗಿ ಕೋವಿಡ್ ಮಾರ್ಗಸೂಚಿಗಳ ಪಾಲನೆಯನ್ನು ಮಾರ್ಚ್ 31ರವರೆಗೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಿ ಎಂದು ಕೇಂದ್ರ ಗೃಹ ಸಚಿವಾಲಯವು ಶುಕ್ರವಾರ ಆದೇಶ ಹೊರಡಿಸಿದೆ.
ಕೊರೋನಾ ನಿಯಂತ್ರಣಕ್ಕೆ ಎಲ್ಲ ರಾಜ್ಯಗಳು ಪ್ರಮಾಣಿತ ಕಾರ್ಯತಂತ್ರ ವಿಧಾನವನ್ನು (ಎಸ್ಒಪಿ) ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್ ಮಾರ್ಗಸೂಚಿ ಸರಿಯಾಗಿ ಪಾಲನೆಯಾಗುತ್ತಿದೆಯೇ ಎನ್ನುವುದರ ಮೇಲೂ ಕಣ್ಗಾವಲು ಇಡಬೇಕು ಎಂದು ಸಚಿವಾಲಯ ಸೂಚಿಸಿದೆ.
ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳು ಮತ್ತು ಹೊಸ ಕೋವಿಡ್ 19 ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಆದರೆ, ಈ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ನಿವಾರಿಸಲು ಕಣ್ಗಾವಲು, ನಿಯಂತ್ರಣ ಮತ್ತು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಸಚಿವಾಲಯ ಹೇಳಿದೆ.
ಕೋವಿಡ್ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಲು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿರುವ ಕೇಂದ್ರ ಗೃಹ ಸಚಿವಾಲಯ, ಇದರಿಂದ ಕೋವಿಡ್ ಪ್ರಸರಣ ಕೊಂಡಿಯನ್ನು ತಪ್ಪಿಸಿ, ಸಾಂಕ್ರಾಮಿಕ ರೋಗ ಇನ್ನಷ್ಟು ಹರಡುವುದನ್ನು ತಪ್ಪಿಸಬಹುದಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.