Tuesday, September 9, 2025

ಹುಲಿ ಹಿಡಿಯಲು ವಿಫಲ: ಬೋನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಕೂಡಿ ಹಾಕಿದ ರೈತರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನಲ್ಲಿ ಹುಲಿ, ಚಿರತೆಗಳು ನುಗ್ಗಿ ಜನ – ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದು, ಇದರಿಂದ ಜೀವ ಭಯದಲ್ಲಿರುವ ಜನರಿಗೆ ಅರಣ್ಯ ಇಲಾಖೆ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ, ಹುಲಿ ಹಿಡಿಯಲು ಇಟ್ಟಿದ್ದ ಬೋನಿನಲ್ಲಿ ಸಿಬ್ಬಂದಿ ಅವರನ್ನು ಕೂಡಿ ಹಾಕಿದ ಘಟನೆ ತಾಲೂಕಿನ ಬೊಮ್ಮಲಾಪುರದಲ್ಲಿ ಇಂದು ನಡೆದಿದೆ.

ಹುಲಿ, ಚಿರತೆ ದಾಳಿಗೆ ಬೇಸತ್ತ ರೈತರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಹುಲಿ ಹಿಡಿಯಲು ಎಂದು ಬಂದಿದ್ದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಜಮೀನಿನಲ್ಲಿ ಇದ್ದ ಬೋನಿನಲ್ಲಿ ಸಿಬ್ಬಂದಿ ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ 2 ತಿಂಗಳಿನಿಂದ ಗ್ರಾಮದ ಹೊರವಲಯದಲ್ಲಿ ಹುಲಿ ಹಾಗೂ ಚಿರತೆ ಕಾಣಿಸಿಕೊಳ್ಳುತ್ತಿವೆ. ಈ ಬಗ್ಗೆ ಜನರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅದರಂತೆ, ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬವರ ಜಮೀನಿನಲ್ಲಿ ಬೋನು ಇಡಲಾಗಿದೆ. ಇಂದು ಹುಲಿ ಮತ್ತೆ ಕಾಣಿಸಿಕೊಂಡಿದ್ದು, ಈ ಬಗ್ಗೆ ಜನರು ಅರಣ್ಯ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾರೆ.

ಗ್ರಾಮದ ಹೊರಭಾಗದಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ತಡವಾಗಿ ಬಂದಿದ್ದಾರೆ. ಇದರಿಂದ ಕುಪಿತಗೊಂಡ ಜನರು ಗಾರ್ಡ್, ವಾಚರ್ ಸೇರಿ 7 ಮಂದಿಯನ್ನು ಅವರೇ ಇಟ್ಟಿದ್ದ ಬೋನಿನಲ್ಲಿ ಕೂಡಿ ಹಾಕಿ ಆಕ್ರೋಶ ಹೊರಗೆಡವಿದ್ದಾರೆ. ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. ಬಳಿಕ ಸಿಬ್ಬಂದಿಯನ್ನು ಬೋನಿನಿಂದ ಹೊರ ಬಿಡುವಂತೆ ಅರಣ್ಯ ಇಲಾಖೆ ಸಿಬ್ಬಂದಿ ಮನವೊಲಿಸಿದರು.

ಮಾಹಿತಿ ಅರಿತ ಗುಂಡ್ಲುಪೇಟೆ ಎಸಿಎಫ್ ಸುರೇಶ್ ಹಾಗೂ ಬಂಡೀಪುರ ಎಸಿಎಫ್ ನವೀನ್ ಕುಮಾರ್, ಡಿಆರ್​ಎಫ್‍ಒ ಸ್ಥಳಕ್ಕೆ ಭೇಟಿ ಆಗಮಿಸಿ ರೈತರ ಮನವೊಲಿಸಿ, ಕೂಡಲೇ ಸಾಕಾನೆ ಬಳಕೆ ಮಾಡಿಕೊಂಡು ಹುಲಿ ಸೆರೆಗೆ ಕೂಂಬಿಂಗ್ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ