ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ಹಲವಾರು ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್ ಬೆದರಿಕೆ ಬರುತ್ತಿರುವ ಪ್ರಕರಣಗಳ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಪ್ರತಿಕ್ರಿಯಿಸಿದ್ದು , ‘ಅಡಚಣೆಯುಂಟುಮಾಡುವ ಕೃತ್ಯಗಳ’ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಕಾನೂನು ಜಾರಿ ಸಂಸ್ಥೆಗಳು ಅಪರಾಧಿಗಳನ್ನು ಬಂಧಿಸುತ್ತವೆ. ಇಂತಹ ಮೂರು ಕರೆಗಳನ್ನು ಮಾಡಿದ್ದಕ್ಕಾಗಿ ಮುಂಬೈ ಪೊಲೀಸರು ಅಪ್ರಾಪ್ತನನ್ನು ಬಂಧಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಭಾರತೀಯ ವಿಮಾನಯಾನ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ದೇಶೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರುವ ಇತ್ತೀಚಿನ ಅಡಚಣೆಯ ಕೃತ್ಯಗಳ ಬಗ್ಗೆ ನಾನು ತೀವ್ರ ಕಳವಳ ಹೊಂದಿದ್ದೇನೆ. ಇಂತಹ ಚೇಷ್ಟೆಯ ಮತ್ತು ಕಾನೂನುಬಾಹಿರ ಕ್ರಮಗಳು ತೀವ್ರ ಕಳವಳಕಾರಿ ವಿಷಯವಾಗಿದೆ. ನಮ್ಮ ವಾಯುಯಾನ ಕ್ಷೇತ್ರದ ಸುರಕ್ಷತೆ, ಭದ್ರತೆ ಮತ್ತು ಕಾರ್ಯಾಚರಣೆಯ ಸಮಗ್ರತೆಗೆ ರಾಜಿ ಮಾಡಿಕೊಳ್ಳುವ ಯಾವುದೇ ಪ್ರಯತ್ನಗಳನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
3 ವಿಮಾನಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆಗಳನ್ನು ನೀಡಿದ ಅಪ್ರಾಪ್ತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಡ್ಡಿಪಡಿಸಿದ ಇತರ ಎಲ್ಲರನ್ನು ಗುರುತಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ ಸಚಿವರು ಪ್ರಯಾಣಿಕರ ಸುರಕ್ಷತೆಯೇ ನಮ್ಮ ಆದ್ಯತೆ ಎಂದು ಹೇಳಿದ್ದಾರೆ.
ಪ್ರಯಾಣಿಕರು ಮತ್ತು ಉದ್ಯಮ ಪಾಲುದಾರರು ಸೇರಿದಂತೆ ಎಲ್ಲಾ ಮಧ್ಯಸ್ಥಗಾರರಿಗೆ ಆ ಕೃತ್ಯದಿಂದ ರಕ್ಷಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ನಾನು ಭರವಸೆ ನೀಡುತ್ತೇನೆ. ಭದ್ರತಾ ಕ್ರಮಗಳನ್ನು ಹೆಚ್ಚಿಸಲು ಮತ್ತು ಜಾಗತಿಕ ಭದ್ರತಾ ಏಜೆನ್ಸಿಗಳೊಂದಿಗೆ ತಡೆರಹಿತ ಸಮನ್ವಯವನ್ನು ಕಾಪಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಮೂರು ದಿನಗಳಲ್ಲಿ 19 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿವೆ. 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ 9 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಅಂದಹಾಗೆ ಇವೆಲ್ಲವೂ ಹುಸಿ ಬಾಂಬ್ ಕರೆಗಳಾಗಿದ್ದವು.