ಬೀಡಿ ಉದ್ಯಮಿ ಮನೆಗೆ ನಕಲಿ ಈಡಿ ರೈಡ್: ಮನೆಗೆ ಸ್ಪೀಕರ್ ಖಾದರ್ ಭೇಟಿ, ಅಧಿಕಾರಿಗಳ ಜೊತೆ ಸಮಾಲೋಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಈಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.

ಬಳಿಕ ಮಾತನಾಡಿದ ಯು.ಟಿ. ಖಾದರ್ ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ವಿವರ ನೀಡಿದರು.

ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು. ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಘಟನೆ ಹಿನ್ನಲೆ;
ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿನ ನಿವಾಸಿ ಸುಲೈಮಾನ್ ಹಾಜಿ ಎಂಬವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ಕಳೆದ ಶುಕ್ರವಾರ ರಾತ್ರಿ ಅವರ ಮನೆಗೆ ತಮಿಳುನಾಡು ರಿಜಿಸ್ಟ್ರೇಶನ್ ಹೊಂದಿರುವ ಮಾರುತಿ ಎರ್ಟಿಗಾ ಕಾರಿನಲ್ಲಿ ಆಗಮಿಸಿದ ದೃಢಕಾಯ ಶರೀರದ 6 ಮಂದಿಯ ತಂಡವೊಂದು ದಾಳಿ ನಡೆಸಿದಂತೆ ನಟಿಸಿದೆ. ನಾವು ಈಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಎಂದು ನಂಬಿಸಿ ಸುಮಾರು ಎರಡೂವರೆ ಗಂಟೆಗಳ ವರೆಗೆ ತನಿಖೆ ನಡೆಸಿದ ನಾಟಕ ಮಾಡಿ ಮನೆಯಲ್ಲಿ ಸಿಕ್ಕಿದ ದೊಡ್ಡ ಸಂಖ್ಯೆಯ ಮೊತ್ತವನ್ನು ದೋಚಿ ಪರಾರಿಯಾಗಿದ್ದಾರೆ. ದರೋಡೆಕೋರರು ವಶಪಡಿಸಿದ್ದ ಮನೆಯವರ ಮೊಬೈಲ್ ಫೋನ್ ಗಳು ಮನೆಯ ತಳಹಂತಸ್ತಿನ ರ್ಯಾಕ್ ನಲ್ಲಿ ನಿನ್ನೆ ಪತ್ತೆಯಾಗಿದೆ. ಈ ದರೋಡೆ ಘಟನೆ ನಾಡಿನಾದ್ಯಂತ ದಿಗ್ಭ್ರಮೆ, ಸಂಚಲನ ಮೂಡಿಸಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!