July 24, 2026
Friday, July 24, 2026
spot_img

ಸರ್ಕಾರಿ ಕಾಲೇಜುಗಳಲ್ಲಿ ಉದ್ಯೋಗಕ್ಕಾಗಿ ಫೇಕ್‌ ಪಿಎಚ್‌ಡಿ ಸರ್ಟಿಫಿಕೆಟ್‌! ಸ್ಕ್ಯಾಮ್‌ನಲ್ಲಿ 249 ಅತಿಥಿ ಉಪನ್ಯಾಸಕರು ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ನಕಲಿ ಪಿಹೆಚ್ ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಉದ್ಯೋಗ ಪಡೆದಿದ್ದ 249 ಅತಿಥಿ ಉಪನ್ಯಾಸಕರ ಪ್ರಕರಣ ಬೆಳಕಿಗೆ ಬಂದಿದ್ದು, ರಾಜ್ಯಾದ್ಯಂತ ಸಂಚಲನ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಜುಲೈ 21ರಂದು ಆದೇಶ ಹೊರಡಿಸಿ, ಸಂಬಂಧಿತ ಅತಿಥಿ ಉಪನ್ಯಾಸಕರ ವಿರುದ್ಧ ತಕ್ಷಣವೇ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಹಾಗೂ ಒಂದು ವಾರದೊಳಗೆ ಅನುಪಾಲನಾ ವರದಿ ಸಲ್ಲಿಸುವಂತೆ ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಿದ್ದಾರೆ.

ಮೂಲಗಳ ಪ್ರಕಾರ, ಆಯುಕ್ತರು ಕಾಲೇಜುಗಳ ಪ್ರಾಂಶುಪಾಲರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ, ನಕಲಿ ಪಿಹೆಚ್ ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಉದ್ಯೋಗ ಪಡೆದಿರುವ ಉಪನ್ಯಾಸಕರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಿದ್ದಾರೆ.

ನಕಲಿ ಪ್ರಮಾಣಪತ್ರ ಸಲ್ಲಿಸಿರುವ 249 ಅತಿಥಿ ಉಪನ್ಯಾಸಕರನ್ನು ತಕ್ಷಣದಿಂದಲೇ ಸೇವೆಯಿಂದ ಬಿಡುಗಡೆ ಮಾಡಲಾಗುವುದು. ಜೊತೆಗೆ, ಭವಿಷ್ಯದಲ್ಲಿ ನಡೆಯುವ ಯಾವುದೇ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಂತೆ ಅವರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು. ಅತಿಥಿ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ನೇಮಕಾತಿ ಪ್ರಾಧಿಕಾರವು ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಿ ನೇಮಕಾತಿ ಆದೇಶ ನೀಡುತ್ತದೆ. ಬಳಿಕ ಆ ದಾಖಲೆಗಳನ್ನು ಸಂಬಂಧಿತ ವಿಶ್ವವಿದ್ಯಾಲಯಗಳಿಗೆ ಕಳುಹಿಸಿ ಪ್ರಮಾಣಪತ್ರಗಳ ಸತ್ಯಾಸತ್ಯತೆ ಪರಿಶೀಲಿಸಲಾಗುತ್ತದೆ.

ಪರಿಶೀಲನೆಗಾಗಿ ಕಳುಹಿಸಲಾದ 249 ಅಭ್ಯರ್ಥಿಗಳ ಪಿಎಚ್‌ಡಿ ಪ್ರಮಾಣಪತ್ರಗಳೂ ನಕಲಿ ಎಂಬುದನ್ನು ಸಂಬಂಧಿತ ವಿಶ್ವವಿದ್ಯಾಲಯಗಳು ದೃಢಪಡಿಸಿವೆ ಎಂದು ತಿಳಿದುಬಂದಿದೆ. ವಿಶ್ವವಿದ್ಯಾಲಯಗಳಿಂದ ವರದಿಗಳು ಬಂದ ಬಳಿಕ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಸಂಬಂಧಿತ ಅಭ್ಯರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನಿಸಿದ್ದಾರೆ.

2016ರ ಮೊದಲು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ನೇಮಕವಾಗಲು ಪಿಎಚ್‌ಡಿ ಕಡ್ಡಾಯ ಅರ್ಹತೆಯಾಗಿರಲಿಲ್ಲ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ನಕಲಿ ಪಿಹೆಚ್ ಡಿ ಪ್ರಮಾಣಪತ್ರ ಸಲ್ಲಿಸಿರುವ ಪ್ರಕರಣ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಬೆಳಕಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !