ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ ಜಂತರ್ ಮಂತರ್‌ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ.
ತಡರಾತ್ರಿಯಿಂದಲೇ ಸುಮಾರು 50ಕ್ಕೂ ಹೆಚ್ಚು ಪೊಲೀಸರು ರಾಠಿ ತಂಗಿದ್ದ ಗುರುಗ್ರಾಮದ ನಿವಾಸದ ಹೊರಗೆ ಕಾವಲು ಕಾಯುತ್ತಿದ್ದರು. ಬೆಳಿಗ್ಗೆ 7:48ರ ಸುಮಾರಿಗೆ ಅವರ ತಾಯಿ ಬಾಗಿಲು ತೆರೆಯುತ್ತಿದ್ದಂತೆ ಮನೆ ಪ್ರವೇಶಿಸಿದ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ದೆಹಲಿಯಲ್ಲಿ ವಶಕ್ಕೆ ಪಡೆಯುವ ಮುನ್ನವೇ ಧ್ರುವ್ ರಾಠಿ ಅವರ ವಿರುದ್ಧ ಕಾನೂನು ತನಿಖೆಗೆ ಒತ್ತಾಯಿಸಿ ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ಸಲ್ಲಿಕೆಯಾಗಿತ್ತು. ಅಕ್ಟೋಬರ್ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಟ-ಹೋರಾಟಗಾರ ಪ್ರಕಾಶ್ ರಾಜ್ ಹಾಗೂ ಇತರರೊಂದಿಗೆ ಸೇರಿ ಚುನಾವಣಾ ಆಯೋಗದ ಎಸ್‌ಐಆರ್ ನಿರ್ಧಾರದ ವಿರುದ್ಧ ನಡೆದ ಪ್ರತಿಭಟನಾ ಸಮಾವೇಶದಲ್ಲಿ ರಾಠಿ ಭಾಗವಹಿಸಿ ಭಾಷಣ ಮಾಡಿದ್ದರು. ಇದು ತೀವ್ರ ರಾಜಕೀಯ ಆಕ್ರೋಶಕ್ಕೆ ಕಾರಣವಾಗಿತ್ತು.



