ಬರ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಬೀದಿಗಳಿದ ರೈತ ಮುಖಂಡರು

ಹೊಸದಿಗಂತ ಚಿತ್ರದುರ್ಗ:

ಬರ ಪರಿಹಾರ ಮತ್ತು ಬೆಳೆ ವಿಮೆ ತಾರತಮ್ಯವನ್ನು ಸರಿಪಡಿಸಿ ರೈತರ ಬ್ಯಾಂಕ್ ಖಾತೆಗೆ ಹಣ ಜಮ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಾಸುದೇವ ಮೇಟಿ ಬಣದವರು ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ನಗರದ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾನಿರತ ರೈತರು ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸುಮಾರು ಅರ್ಧ ಗಂಟೆಗಳ ಕಾಲ ವಾಹನಗಳ ಸಂಚಾರವನ್ನು ತಡೆದು ಸರ್ಕಾರದ ಗಮನ ಸೆಳೆದರು.

ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ ತೆರೆಯಲಾಗಿರುವ ಬರ ಪರಿಹಾರ ಸಹಾಯವಾಣಿ ಕೇಂದ್ರದಲ್ಲಿ ರೈತರಿಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ದಾಖಲೆಗಳನ್ನು ಕೊಡಿ ಪರಿಶೀಲಿಸಿ ಹೇಳುತ್ತೇವೆಂಬ ಉತ್ತರ ಕೊಡುತ್ತಿದ್ದಾರೆ. ಬೋರ್‌ವೆಲ್ ಕೊರೆಸಿರುವ ರೈತರ ಜಮೀನುಗಳನ್ನು ನೀರಾವರಿ ಎಂದು ನಮೂದಿಸಿರುವುದರಿಂದ ಅನೇಕರಿಗೆ ಬೆಳೆ ವಿಮೆ, ಬರ ಪರಿಹಾರದ ಹಣ ಕೈಸೇರುತ್ತಿಲ್ಲ. ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿರುವ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮೀನಾಮೇಷ ಎಣಿಸುತ್ತಿದೆ ಎಂದು ರೈತರು ದೂರಿದರು.

ಗೋಮಾಳ, ಅರಣ್ಯ ಭೂಮಿ, ಬಗರ್‌ಹುಕುಂ, ಹುಲ್ಲುಬನ್ನಿ ಖರಾಬ್, ಸೇಂದಿವನ ಸಾಗುವಳಿ ಮಾಡಿರುವ ರೈತರೂ ಬರದಿಂದ ತತ್ತರಿಸಿದ್ದಾರೆ. ಈರುಳ್ಳಿ, ಮೆಕ್ಕೆಜೋಳ, ಶೇಂಗಾ, ತೊಗರಿ, ರಾಗಿ, ಸಜ್ಜೆ, ಹತ್ತಿ, ಸೂರ್ಯಕಾಂತಿ, ತೋಟಗಾರಿಕೆ ಬೆಳೆಗಳು, ಹೂವು ಬೆಳೆಯುವಂತ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಮೂವತ್ತೈದು ಸಾವಿರ ರೂ.ಗಳನ್ನು ಶೀಘ್ರವಾಗಿ ನೀಡುವಂತೆ ರೈತರು ಒತ್ತಾಯಿಸಿದರು.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!