ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದಲ್ಲಿ ರೈತರು ಬೃಹತ್ ಪ್ರತಿಭಟನೆ (Farmers Protest) ನಡೆಸಿದ್ದು, ಚಂಡೀಗಢ-ದೆಹಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ರೈತ ಮುಖಂಡ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಹರಿಯಾಣದ ಕುರುಕ್ಷೇತ್ರ ಜಿಲ್ಲೆಯಲ್ಲಿ ಸಾವಿರಾರು ರೈತರು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.
ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಅವರು ಸೂರ್ಯಕಾಂತಿ ಬೆಳೆದ 8,528 ರೈತರಿಗೆ 29.13 ಕೋಟಿ ರೂಪಾಯಿ ಮಧ್ಯಂತರ ಪರಿಹಾರ ವಿತರಣೆ ಮಾಡಿದ್ದಾರೆ. ಆದರೂ, ಪರಿಹಾರದಿಂದ ಸಮಾಧಾನಗೊಳ್ಳದ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಹರಿಯಾಣ ರೈತರ ಪ್ರತಿಭಟನೆಗೆ ಪಂಜಾಬ್, ಉತ್ತರ ಪ್ರದೇಶ ಸೇರಿ ನೆರೆರಾಜ್ಯದ ಹಲವು ರೈತ ಮುಖಂಡರು ಬೆಂಬಲ ಸೂಚಿಸಿದ್ದಾರೆ.
ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ ರೈತರು, ‘ಬೆಂಬಲ ಬೆಲೆ ನೀಡಿ, ರೈತರನ್ನು ಉಳಿಸಿ’ (MSP Dilao, Kisan Bachao) ಸೇರಿ ಹಲವು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
ರೈತರ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಮುಖಂಡ ರಾಕೇಶ್ ಟಿಕಾಯತ್, ‘ನಾವು ಹೆದ್ದಾರಿಯನ್ನು ಬಂದ್ ಮಾಡಿಲ್ಲ. ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುವುದು ಸರಿಯಲ್ಲ’ ಎಂದು ಹೇಳಿದರು. ‘ಸರ್ಕಾರಕ್ಕೆ ನಾವು ಎರಡೇ ಬೇಡಿಕೆಗಳನ್ನು ಇಡುತ್ತಿದ್ದೇವೆ. ನಮಗೆ ಬೆಂಬಲ ಬೆಲೆ ನೀಡಬೇಕು ಹಾಗೂ ಬಂಧಿತರ ರೈತರನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಇಲ್ಲದಿದ್ದರೆ ಇನ್ನಷ್ಟು ಉಗ್ರವಾಗಿ ನಾವು ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.