May 15, 2026
Friday, May 15, 2026
spot_img

ಚಾರ್ಮಾಡಿ ಘಾಟ್‌ನಲ್ಲಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಭಾನುವಾರ ಎರಡು ಪ್ರತ್ಯೇಕ ರಸ್ತೆ ಅಪಘಾತಗಳು ಸಂಭವಿಸಿದ್ದು, ಒಟ್ಟು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಾಟ್‌ನ ತಿರುವುಗಳಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅವಘಡಗಳು ಸಂಭವಿಸಿವೆ ಎಂದು ತಿಳಿದುಬಂದಿದೆ.

ಧರ್ಮಸ್ಥಳದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಂಧ್ರಪ್ರದೇಶಕ್ಕೆ ಮರಳುತ್ತಿದ್ದ ಖಾಸಗಿ ಬಸ್, ಚಾರ್ಮಾಡಿ ಘಾಟಿನ 4ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಪೈಕಿ ಗಂಭೀರವಾಗಿ ಗಾಯಗೊಂಡವರನ್ನು ತಕ್ಷಣವೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಸಣ್ಣಪುಟ್ಟ ಗಾಯಾಳುಗಳಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಬಸ್ ಅಪಘಾತದ ಬೆನ್ನಲ್ಲೇ ಚಾರ್ಮಾಡಿ ಘಾಟ್‌ನ ಮತ್ತೊಂದು ಭಾಗದಲ್ಲಿ ಗೂಡ್ಸ್ ವಾಹನವೊಂದು ಪಲ್ಟಿಯಾಗಿದೆ. ಇಲ್ಲೂ ಕೂಡ ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಪಘಾತದ ವಿಷಯ ತಿಳಿಯುತ್ತಿದ್ದಂತೆಯೇ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಾಟಿಯಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಿ, ಪಲ್ಟಿಯಾಗಿದ್ದ ವಾಹನಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಯಿತು. ಮದುವೆ ಸಂಭ್ರಮ ಮುಗಿಸಿ ಮನೆಗೆ ಮರಳುತ್ತಿದ್ದವರ ಬಾಳಿನಲ್ಲಿ ಈ ಅಪಘಾತ ಕತ್ತಲು ತುಂಬುವಂತಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !