ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುನೈಟೆಡ್ ಅರಬ್ ಎಮಿರೇಟ್ಸ್‌ನ (UAE) ರಾಸ್ ಅಲ್ ಖೈಮಾದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 13 ಮಂದಿ ಮೃತಪಟ್ಟಿದ್ದು, 14 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತ ಸಂಭವಿಸಿದ್ದು ಹೇಗೆ?
ಸ್ಥಳೀಯ ಅಧಿಕಾರಿಗಳ ಮಾಹಿತಿಯ ಪ್ರಕಾರ, ಮಂಗಳವಾರ ಬೆಳಗಿನ ಜಾವ ಅಲ್ ವತನ್ ರಸ್ತೆಯಲ್ಲಿ ಈ ದುರಂತ ನಡೆದಿದೆ. ತಾಂತ್ರಿಕ ದೋಷದಿಂದಾಗಿ ರಸ್ತೆಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗೆ 41 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದ್ದು, ರಕ್ಷಣಾ ತಂಡಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿವೆ.
ಸಾವಿನ ಸಂಖ್ಯೆ 13ಕ್ಕೆ ಏರಿಕೆ
ಆರಂಭದಲ್ಲಿ 11 ಮಂದಿ ಮೃತಪಟ್ಟಿದ್ದರು. ಆದರೆ, ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳ ಪೈಕಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರಿಂದ ಒಟ್ಟು ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಉಳಿದ 14 ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯರಿಗೆ ಸಹಾಯವಾಣಿ ಬಿಡುಗಡೆ
ಘಟನೆ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಸಂತಾಪ ಸೂಚಿಸಿರುವ ದುಬೈನ ಭಾರತೀಯ ರಾಯಭಾರಿ ಕಚೇರಿ, ಮೃತರಲ್ಲಿ ಭಾರತೀಯರೂ ಸೇರಿದ್ದಾರೆ ಎಂದು ಖಚಿತಪಡಿಸಿದೆ. ಮೃತರ ಕುಟುಂಬಸ್ಥರನ್ನು ಈಗಾಗಲೇ ಸಂಪರ್ಕಿಸಲಾಗಿದ್ದು, ಅಗತ್ಯ ನೆರವು ನೀಡಲು ಸ್ಥಳೀಯ ಆಡಳಿತದೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ ಎಂದು ತಿಳಿಸಿದೆ. ಅಲ್ಲದೆ, ತುರ್ತು ಮಾಹಿತಿ ಹಾಗೂ ಸಹಾಯಕ್ಕಾಗಿ 24 ಗಂಟೆಗಳ ಉಚಿತ ಸಹಾಯವಾಣಿ ಸಂಖ್ಯೆ 800-46342 ಅನ್ನು ಬಿಡುಗಡೆ ಮಾಡಿದೆ.



