ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್‌ವೊಂದು ಎರಡು ಟ್ರಕ್‌ಗಳಿಗೆ ಡಿಕ್ಕಿಯಾದ ಪರಿಣಾಮ 45 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನ ಲಹ್ದಿ ಕಾ ಬಾಸ್ ಬಳಿ ದಟ್ಟ ಮಂಜಿನಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬದಿದೆ. ಪ್ರಯಾಣಿಕರಿದ್ದ ಬಸ್ ಉಜ್ಜಯಿನಿಯಿಂದ ದೆಹಲಿಗೆ ತೆರಳುತ್ತಿದ್ದರು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಚಾರುಲ್ ಗುಪ್ತಾ ಅವರು ಮಾಹಿತಿ ನೀಡಿದ್ದಾರೆ.
ಅಪಘಾತದಲ್ಲಿ ಬಸ್ಸಿನಲ್ಲಿದ್ದ ಸುಮಾರು 45 ಪ್ರಯಾಣಿಕರು ಗಾಯಗೊಂಡಿದ್ದು, 20ಕ್ಕೂ ಹೆಚ್ಚು ಮಂದಿಯನ್ನು ದೌಸಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರನ್ನು ಜೈಪುರ ಮತ್ತು ಕೆಲವರನ್ನು ಚಿಕಿತ್ಸೆಗಾಗಿ ನೋಯ್ಡಾ ಮತ್ತು ದೆಹಲಿಗೆ ಕರೆದೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.
ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ. ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.