ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರವಾಸ ಮುಗಿಸಿ ಸಂಭ್ರಮದಿಂದ ಮನೆಗೆ ಮರಳುತ್ತಿದ್ದವರಿಗೆ ರಾಷ್ಟ್ರೀಯ ಹೆದ್ದಾರಿ 48 ಸಾವಿನ ದಾರಿಯಾಗಿದೆ. ತುಮಕೂರು ತಾಲೂಕಿನ ನೆಲಹಾಳ್ ಸಮೀಪ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಅತೀ ವೇಗವಾಗಿ ಬಂದ ಕಾರು ಹಿಂಬದಿಯಿಂದ ಪ್ರಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಉಳಿದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆಯೇ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಹಾಗೂ ಕೋರಾ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಕೋರಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




