ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಬಿಹಾರ ಕಡೆಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅರೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ದುರಂತದಲ್ಲಿ ಅನೇಕ ಪ್ರಯಾಣಿಕರು ನಿದ್ರೆಯಲ್ಲಿದ್ದ ಸಮಯದಲ್ಲೇ ಘಟನೆ ಸಂಭವಿಸಿದ ಕಾರಣ ಗಾಯದ ಪ್ರಮಾಣ ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ನಂತರ ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಕಾನ್ಪುರದ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸುವ ಕಾರ್ಯ ತ್ವರಿತವಾಗಿ ನಡೆದಿದೆ. ಬಸ್ ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಇದಕ್ಕೂ ಒಂದು ವಾರದ ಹಿಂದಷ್ಟೇ ಇದೇ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಲೀಪರ್ ಬಸ್ ಪಲ್ಟಿಯಾದ ಘಟನೆ ನಡೆದಿದ್ದು, ಆಗ ಕೂಡ ಹಲವು ಪ್ರಯಾಣಿಕರು ಗಾಯಗೊಂಡಿದ್ದರು. ಮರುಕಳಿಸುತ್ತಿರುವ ಅಪಘಾತಗಳು ರಸ್ತೆ ಸುರಕ್ಷತೆ ಹಾಗೂ ವಾಹನಗಳ ನಿರ್ವಹಣೆಯ ಬಗ್ಗೆ ಪ್ರಶ್ನೆಗಳು ಮೂಡಿಸುತ್ತಿವೆ.

