ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಅನೇಕರು ಅಪಾಯದಿಂದ ಪಾರಾಗಿದ್ದಾರೆ. ನೆಲ್ಲೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ನಡೆದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬಸ್‌ನ ಬಲಭಾಗದ ಟೈರ್ ಏಕಾಏಕಿ ಸ್ಫೋಟಗೊಂಡ ಕಾರಣ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ಬಸ್ ರಸ್ತೆ ವಿಭಜಕವನ್ನು ದಾಟಿ ಎದುರು ದಿಕ್ಕಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿಯಲ್ಲಿ ಬೈಕ್‌ಗಳನ್ನು ಸಾಗಿಸಲಾಗುತ್ತಿತ್ತು. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿವೆ.
ಅಪಘಾತದ ನಂತರ ಸ್ಥಳೀಯ ನಿವಾಸಿಗಳು ತಕ್ಷಣ ಸ್ಪಂದಿಸಿ, ಬಸ್‌ನ ಕ್ಲೀನರ್ ಹಾಗೂ ಕಂಡಕ್ಟರ್ ಸಹಾಯದಿಂದ ಕಿಟಕಿಗಳನ್ನು ಒಡೆದು ಒಳಗಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತಂದಿದ್ದಾರೆ. ಆದರೆ ಬಸ್ ಚಾಲಕ, ಕಂಟೇನರ್ ಲಾರಿ ಚಾಲಕ ಹಾಗೂ ಕ್ಲೀನರ್ ಸುಟ್ಟ ಗಾಯಗಳಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್‌ನಲ್ಲಿದ್ದ 36 ಪ್ರಯಾಣಿಕರಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ನಾಲ್ವರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.


