ಕೊರೋನಾ 4ನೇ ಅಲೆಯ ಆತಂಕ: ರಾಜ್ಯ ಸರಕಾರ ಅಲರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ದೇಶದಲ್ಲಿ ಕೊರೋನಾ 4ನೇ ಅಲೆಯ ಭೀತಿ ಶುರುವಾಗಿದ್ದು, ಇದರ ಬೆನ್ನಲ್ಲೇ ಅಲರ್ಟ್ ಆಗಿರುವ ಕರ್ನಾಟಕ ಮುಂಜಾಗ್ರತೆ ವಹಿಸಲು ಮುಂದಾಗಿದೆ.

ಈಗಾಗಲೇ ಕೇರಳ ಮತ್ತು ಕರ್ನಾಟಕ ಕೋವಿಡ್ ಹಾಟ್‌ಸ್ಪಾಟ್‌ ರಾಜ್ಯಗಳಾಗಿ ಕಾಣಿಸಿಕೊಂಡಿವೆ. ರಾಜ್ಯದಲ್ಲಿ 92 ಮಂದಿಗೆ ಸೋಂಕು ದೃಢವಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲಿಯೇ ಆರೋಗ್ಯ ಇಲಾಖೆ ಹೇಗೆ ಸಿದ್ಧತೆ ಮಾಡಿಕೊಂಡಿದೆ ಎಂಬುದನ್ನು ಆರೊಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿದ್ದು, ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಕೋವಿಡ್‌ಗೆ ಜಯದೇವ ಆಸ್ಪತ್ರೆ ಹಾಗೂ ಸಿಎಂಎಚ್ ಆಸ್ಟರ್ ಆಸ್ಪತ್ರೆಯಲ್ಲಿ ತಲಾ ಒಬ್ಬರಂತೆ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಕೊರೋನಾದಿಂದಲೇ ಸಾವನ್ನಪ್ಪಿದ್ದಾರಾ ಎಂಬುದನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಇನ್ನು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಅಧಿಕಾರಿಗಳ ಜೊತೆ ತಯಾರಿ ಬಗ್ಗೆ ಚರ್ಚೆ ಮಾಡಲಾಗಿದೆ. ಬೆಂಗಳೂರಲ್ಲಿ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು ಅಂತ ತಿಳಿಸಿದ್ದೇನೆ. ಕೋವಿಡ್ ಪರೀಕ್ಷೆಗಳ ಸಂಖ್ಯೆ ಹೆಚ್ಚಳಕ್ಕೆ ತಿಳಿಸಲಾಗಿದೆ. ರಾಜ್ಯದಲ್ಲಿ ಪ್ರತಿ ದಿನ 1500 ಟೆಸ್ಟ್ ಮಾಡಲು ಹಾಗೂ ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಎಲ್ಲ ವ್ಯವಸ್ಥೆ ಸರಿಯಾಗಿಟ್ಟುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಜೊತೆಗೆ, ಬೆಂಗಳೂರಿನ ಬಿಬಿಎಂಪಿ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಗಳು ಇಲ್ಲ. ಆದರೆ ಇಲ್ಲಿ ವೆಂಟಿಲೇಶನ್ ಬೆಡ್ ಗಳು ಸಾಕಷ್ಟು ಸಂಖ್ಯೆಯಲ್ಲಿ ಇವೆ. ಅವುಗಳನ್ನು ಬಳಕೆ ಮಾಡಿಕೊಳ್ಳಲಾಗುವುದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ
ನಾಳೆ ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೋವಿಡ್ ಸೋಂಕಿನ ಪ್ರಾಬಲ್ಯತೆ, ಸೋಂಕು ನಿರ್ವಹಣೆ ಮತ್ತು ಸೋಂಕು ನಿಯಂತ್ರಣಾ ಕಾರ್ಯದ ಸಿದ್ಧತೆಯ ಬಗ್ಗೆ ಪರಿಶೀಲನಾ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ರಾಜ್ಯಾದ್ಯಂತ ಯಾವ ರೀತಿ ಪೂರ್ವ ತಯಾರಿ ಮಾಡಿಕೊಳ್ಳಬೇಕು ಅಂತ ಚರ್ಚೆ ನಡೆಯಲಿದೆ. ಅಗತ್ಯಕ್ಕೆ ತಕ್ಕಂತೆ ಸೋಂಕು ನಿಯಂತ್ರಣಕ್ಕೆ ಬೇಕಾದ ವೈದ್ಯಕೀಯ ಪರಿಕರ ಎಷ್ಟು ಬೇಕು ಅನ್ನೋದನ್ನ ಚರ್ಚೆ ಮಾಡಿ ಖರೀದಿ ಮಾಡಲಾಗುವುದು ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!