Friday, January 9, 2026

ಬಂಧನದ ಭೀತಿ, ಕುಸಿದು ಬಿದ್ದ ಸದಸ್ಯೆ: ಸುಜಾತಾ ಹಂಡಿ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಹೊಸದಿಗಂತ ಹುಬ್ಬಳ್ಳಿ:

ಕ್ಷುಲ್ಲಕ ಕಾರಣಕ್ಕಾಗಿ ಬಿಜೆಪಿ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಪಾಲಿಕೆ ಸದಸ್ಯೆ ಸುವರ್ಣ ಕಲ್ಲಕುಂಟ್ಲಾ ಅವರು, ಪೊಲೀಸರು ವಶಕ್ಕೆ ಪಡೆಯಲು ಬಂದ ಸಂದರ್ಭದಲ್ಲಿ ಕುಸಿದು ಬಿದ್ದ ಘಟನೆ ನಡೆದಿದೆ. ಪ್ರಸ್ತುತ ಅವರನ್ನು ಚಿಕಿತ್ಸೆಗಾಗಿ ನಗರದ ಕೆಎಂಸಿಆರ್‌ಐ (KMCRI) ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಅವರ ಮೇಲೆ ಪಾಲಿಕೆ ಸದಸ್ಯೆ ಸುವರ್ಣ ಕಲ್ಲಕುಂಟ್ಲಾ ಸೇರಿದಂತೆ ಒಟ್ಟು ಒಂಬತ್ತು ಜನರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಸುಜಾತ ಅವರ ಸಹೋದರ ಮರಿಯಾದಾಸ್ ಅವರು ಬುಧವಾರ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಪೊಲೀಸರು ಸುವರ್ಣ ಅವರನ್ನು ವಿಚಾರಣೆಗೆಂದು ವಶಕ್ಕೆ ಪಡೆಯಲು ಹೋದಾಗ, ಅವರು ಹಠಾತ್ತನೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.

ಘಟನೆಯನ್ನು ಖಂಡಿಸಿ ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಬುಧವಾರ ಕೇಶ್ವಾಪುರ ಪೊಲೀಸ್ ಠಾಣೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. “ಸುವರ್ಣ ಕಲ್ಲಕುಂಟ್ಲಾ ಅವರನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ವೈದ್ಯರು ಸುವರ್ಣ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಪೊಲೀಸರು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ.

error: Content is protected !!