ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರುಣಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಸ್ಸಾಂನಲ್ಲಿ ಪ್ರವಾಹ ಸ್ಥಿತಿ ಗಂಭೀರವಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೋಮವಾರ ತಿಳಿಸಿದ್ದಾರೆ.
ಬ್ರಹ್ಮಪುತ್ರ ಹಾಗೂ ಅದರ ಉಪನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ, ಮುಂದಿನ ಎರಡು- ಮೂರು ದಿನಗಳ ಕಾಲ ಅಧಿಕ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ಎಂದರು.
14 ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿಯಿದ್ದು, 2.74 ಲಕ್ಷ ಜನ ಸಂತ್ರಸ್ತರಾಗಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಸೇನಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ತುರ್ತು ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮೂಲಕ ಮಾಹಿತಿ ಪಡೆದಿದ್ದು, ನೆರವಿನ ಭರವಸೆ ನೀಡಿದ್ದಾರೆ ಎಂದರು.