ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಹಾಗೂ ಪುದುಚೇರಿಯಲ್ಲಿ ತಲ್ಲಣ ಸೃಷ್ಟಿಸಿದ್ದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕದ ಬಾಗಿಲಿಗೂ ಬಂದಿದೆ.
ಸೈಕ್ಲೋನ್ ಪರಿಣಾಮ ಕಳೆದೆರಡು ದಿನಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಇವತ್ತು ಮತ್ತಷ್ಟು ಜೋರಾಗುವ ಸಾಧ್ಯತೆಯಿದೆ. ಅರಬ್ಬೀ ಸಮುದ್ರದತ್ತ ಹೊರಟಿರುವ ಫೆಂಗಲ್ ಚಂಡಮಾರುತ ಈಗ ಕರ್ನಾಟಕದಲ್ಲೂ ಕಂಪನ ಸೃಷ್ಟಿಸಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣದ ರಾಜ್ಯಗಳಲ್ಲಿ ಅಬ್ಬರಿಸುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿರುವ ಕಾರಣ ಕರ್ನಾಟಕದ 10 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಪರಿಣಾಮ ಆಗಲಿದೆ ಎಂಬ ಮುನ್ಸೂಚನೆ ಇದೆ. ಇನ್ನು, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಉತ್ತರಕನ್ನಡ, ತುಮಕೂರು, ಹಾವೇರಿ ಜಿಲ್ಲೆಗಳ ಮೇಲೂ ನಿಗಾ ಇಡುವಂತೆ ಕೇಂದ್ರ ಹವಾಮಾನ ಇಲಾಖೆ ಹೇಳಿದೆ.
ಹೀಗಾಗಿ, ಫೆಂಗಲ್‌ನಿಂದ ಹೆಚ್ಚು ಮಳೆಯಾಗಬಹುದು ಎಂಬ ಮುನ್ಸೂಚನೆ ಇರುವ 10 ಜಿಲ್ಲೆಗಳ ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮವಾಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ.