ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 25ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿದೆ. ಈ ದುರ್ಘಟನೆ ಮಹಾರಾಷ್ಟ್ರದ ಪುಣೆಯ ಪ್ರಸಿದ್ಧ ಶಿವಾಜಿ ಮಾರುಕಟ್ಟೆಯಲ್ಲಿ ನಡೆದಿದೆ.
ನಸುಕಿನ ಜಾವ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ 25 ಅಂಗಡಿಗಳು ಸುಟ್ಟು ಹೋಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಅರ್ಧ ಗಂಟೆಗೊಳಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಪ್ರಶಾಂತ್ ರಾನ್ಪೈಸ್ ಮಾಹಿತಿ ನೀಡಿದ್ದಾರೆ.
ಈ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.