September 19, 2026
Saturday, September 19, 2026
spot_img

ಬೆಂ-ಮೈ ಹೈವೇ ಬಳಿ ಅಗ್ನಿ ತಾಂಡವ: ಬೆಂಕಿಯ ಕೆನ್ನಾಲಿಗೆಗೆ 12ಕ್ಕೂ ಹೆಚ್ಚು ಗೋದಾಮುಗಳು ಭಸ್ಮ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ಜಿಲ್ಲೆಯ ಹೊರವಲಯದ ಹಳೆ ಕೆಸರೆ ಗ್ರಾಮದಲ್ಲಿ ಇಂದು ನಸುಕಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸಾಲು ಸಾಲು ಗುಜರಿ ಗೋದಾಮುಗಳು ಬೆಂಕಿಗೆ ಆಹುತಿಯಾಗಿವೆ.

ಮೈಸೂರು-ಬೆಂಗಳೂರು ಹೆದ್ದಾರಿಗೆ ಹೊಂದಿಕೊಂಡಂತಿರುವ ಹಳೆ ಕೆಸರೆ ಗ್ರಾಮದ ಗುಜರಿ ಗೋದಾಮುಗಳಲ್ಲಿ ಮುಂಜಾನೆ ಸುಮಾರು 3:30ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿಯ ಜ್ವಾಲೆ ಪಕ್ಕದ ಗೋದಾಮುಗಳಿಗೂ ವ್ಯಾಪಿಸಿದ್ದು, ಸುಮಾರು 12ಕ್ಕೂ ಹೆಚ್ಚು ವಿವಿಧ ಗೋದಾಮುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.

ಬೆಳಗಿನ ಜಾವ 4:30ರ ಸುಮಾರಿಗೆ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಗಂಟೆಗಳ ಕಾಲ ಸತತ ಪ್ರಯತ್ನ ನಡೆಸಿದರೂ, ಜ್ವಾಲೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.

ಹಳೆಯ ಪ್ಲಾಸ್ಟಿಕ್, ಕಬ್ಬಿಣ ಹಾಗೂ ಇತರೆ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮುಗಳು ಇವಾಗಿದ್ದರಿಂದ ಬೆಂಕಿ ವೇಗವಾಗಿ ಹರಡಿದೆ. ಈ ದುರಂತದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ ಎಂದು ಅಂದಾಜಿಸಲಾಗಿದೆ. ಎನ್.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಬೆಂಕಿ ಅವಘಡಕ್ಕೆ ನಿಖರವಾದ ಕಾರಣವಿನ್ನೂ ತಿಳಿದುಬಂದಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !