ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಪ್ರದೇಶದಲ್ಲಿ ಮೊದಲ ಹಂತದ ಮತದಾನ ಈಗಾಗಲೇ ಪ್ರಾರಂಭವಾಗಿದೆ. ಪ್ರಜಾಪ್ರಭುತ್ವದ ಈ ಪವಿತ್ರ ಹಬ್ಬದಲ್ಲಿ ಎಲ್ಲರೂ ಉತ್ಸಾಹದಿಂದ ಭಾಗವಹಿಸಿ ಮತದಾನ ಮಾಡಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ್ದು, ಇಂದು ಉತ್ತರಪ್ರದೇಶ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ. ಎಲ್ಲ ಮತದಾರರು ಕೋವಿಡ್ ನಿಯಮಗಳನ್ನು ಪಾಲಿಸಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಿ ಎಂದು ವಿನಂತಿಸುತ್ತೇನೆ. ನೆನಪಿಡಿ, ಮೊದಲು ಮತದಾನ ನಂತರ ಉಪಹಾರ ಎಂದು ಹೇಳಿದ್ದಾರೆ.
ಬೆಳಗ್ಗೆ 6:30 ರಿಂದಲೇ ಜನ ಮತದಾನ ಮಾಡಲು ಮತಗಟ್ಟೆಗಳಿಗೆ ಆಗಮಿಸಿದ್ದಾರೆ. ಇಂದು 11 ಜಿಲ್ಲೆಗಳ 58 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಒಟ್ಟು 623 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 403 ಸದಸ್ಯ ಬಲದ ಉತ್ತರ ಪ್ರದೇಶದಲ್ಲಿ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಮಾ.10 ರಂದು ಫಲಿತಾಂಶ ಹೊರಬೀಳಲಿದೆ.