ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ದಾರುಣ ಘಟನೆ ಮಧ್ಯ ಪ್ರದೇಶದ ಉಮಾರಿಯಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 43ರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಜ್ಗಾವಾ ಗ್ರಾಮದ ಬಳಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾರು ಉಮಾರಿಯಾದಿಂದ ಶಹದೋಲ್‌ಗೆ ತೆರಳುತ್ತಿತ್ತು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಟ್ಟು ಐದು ಮಂದಿ ಪ್ರಯಾಣಿಸುತ್ತಿದ್ದು, ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ.
ಅಪಘಾತಕ್ಕೆ ಅತಿ ವೇಗವೇ ಕಾರಣ ಎಂದು ಉಮಾರಿಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿವೇದಿತಾ ನಾಯ್ಡು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.