March 15, 2026
Sunday, March 15, 2026
spot_img

ಜನರ ಅಭಿವೃದ್ಧಿಗಾಗಿ ಪಂಚ ಗ್ಯಾರಂಟಿ ಯೋಜನೆ: ಹೆಚ್.ಎಂ.ರೇವಣ್ಣ

ಹೊಸ ದಿಗಂತ ವರದಿ, ರಾಯಚೂರು :

ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಅಭಿವೃದ್ಧಿಗಾಗಿಯೇ ಹೊರತು ಚುನಾವಣಾ ದೃಷ್ಠಿಯಿಂದ ಜಾರಿ ಮಾಡಿಲ್ಲ. ರಾಜ್ಯಾದ್ಯಂತ ಪರಿಪೂರ್ಣವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಹೇಳಿದರು.

ಶನಿವಾರ ನಗರದ ಕೃಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಈಗಾಗಲೇ ರಾಜ್ಯದ ೩೧ ಜಿಲ್ಲೆಗಳ ಪೈಕಿ ೨೧ ಜಿಲ್ಲೆಯಲ್ಲಿ ಕಾರ್ಯಾಗಾರಗಳ ಮೂಲಕ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ. ಅಲ್ಲದೆ ಸಾರ್ವಜನಿಕರಿಂದ ಜನಾಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ೨೦ ಅಂಶಗಳ ಕಾರ್ಯಕ್ರಮ ದೇಶದ ಬಡವರ ಜೀವನದಲ್ಲಿ ಸಾಕಷ್ಟು ಬದಲಾವಣೆ ತಂದಿತು. ಇವರ ನೇತೃತ್ವದಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ ಅರಸ್ ರಕ್ತ ಕ್ರಾಂತಿ ಇಲ್ಲದೆಯೇ ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಜಾರಿ ಮಾಡಿ, ಭೂ ರಹಿತರಿಗೆ ಭೂಮಿ ಹಕ್ಕು ದೊರಕಿಸಿಕೊಟ್ಟು ಶೋಷಿತರ ನಾಯಕರಾದರು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಬಾರಿ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಶಕ್ತಿ ಯೋಜನೆಯಡಿ ೫೦೦ ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಗೃಹಲಕ್ಷಿö್ಮ ಯೋಜನೆಯಡಿ ೧.೨ ಕೋಟಿ ಮಹಿಳೆಯರು ನೊಂದಣಿಯಾಗಿದ್ದು, ಇವರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಹಣವನ್ನು ಡಿ.ಬಿ.ಸಿ ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದರು.

ಗೃಹಜ್ಯೋತಿ ರಾಜ್ಯದ ಎಲ್ಲ ಮನೆಗಳಿಗೆ ೨೦೦ ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಯುವನಿಧಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷ ಡಾ.ಪುಷ್ಪಾ ಅಮರನಾಥ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಾಮಯ್ಯ ಮುರಾರಿ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪವನ ಕಿಶೋರ ಪಾಟೀಲ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ಸೇರಿದಂತೆ ಇತರರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !