ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿರುವ ಐದು ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಕ್ಷಣಗಣನೆ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಂಚೆ ಮತಗಳ ಎಣಿಕೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ಅಂಚೆ ಮತಗಳೇ ಮೊದಲು: ನಿಯಮದಂತೆ ಮೊದಲು ಅಂಚೆ ಮತಗಳನ್ನು ಎಣಿಕೆ ಮಾಡಲಾಗುತ್ತಿದೆ. ಇದಾದ ಬಳಿಕ ಸುಮಾರು 8:30 ರಿಂದ ಇವಿಎಂ ಮತಗಳ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಎಲ್ಲಾ ಮತ ಎಣಿಕೆ ಕೇಂದ್ರಗಳ ಸುತ್ತ ಮೂರು ಹಂತದ ಭದ್ರತೆಯನ್ನು ನಿಯೋಜಿಸಲಾಗಿದೆ. ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಪಾರದರ್ಶಕವಾಗಿ ಪ್ರಕ್ರಿಯೆ ನಡೆಯುತ್ತಿದೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ನೇರ ಪೈಪೋಟಿ ಕಂಡುಬರುತ್ತಿದ್ದರೆ, ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿಕೂಟಗಳ ನಡುವೆ ತೀವ್ರ ಹಣಾಹಣಿ ನಿರೀಕ್ಷಿಸಲಾಗಿದೆ.
ಈ ಚುನಾವಣೆಯು ಒಟ್ಟು 824 ವಿಧಾನಸಭಾ ಕ್ಷೇತ್ರಗಳ ಫಲಿತಾಂಶವನ್ನು ಹೊರಹಾಕಲಿದೆ. ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಲಿದೆಯೇ ಅಥವಾ ಕೇರಳದಲ್ಲಿ ಎಡರಂಗ ತನ್ನ ಪಾರುಪತ್ಯ ಮುಂದುವರಿಸಲಿದೆಯೇ ಎಂಬ ಪ್ರಶ್ನೆಗೆ ಇಂದು ಸಂಜೆಯ ವೇಳೆಗೆ ಸ್ಪಷ್ಟ ಉತ್ತರ ಸಿಗಲಿದೆ.
ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ ಮತ್ತು ಆ್ಯಪ್‌ಗಳಲ್ಲಿ ಪ್ರತಿ ಸುತ್ತಿನ ಮತ ಎಣಿಕೆಯ ನಂತರ ಟ್ರೆಂಡ್‌ಗಳನ್ನು ಅಪ್‌ಡೇಟ್ ಮಾಡಲಾಗುತ್ತಿದೆ. ಆರಂಭಿಕ ಟ್ರೆಂಡ್‌ಗಳಲ್ಲಿ ಅಂಚೆ ಮತಗಳ ಮುನ್ನಡೆ ಕಂಡುಬರುತ್ತಿದ್ದು, ಇದು ಅಂತಿಮ ಫಲಿತಾಂಶದ ಮೇಲೆ ಯಾವ ರೀತಿ ಪ್ರಭಾವ ಬೀರಲಿದೆ ಎಂಬುದು ಕುತೂಹಲ ಮೂಡಿಸಿದೆ.



