ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರ್ಗಿ, ವಿಜಯಪುರ ಯಾದಗಿರಿ ಸೇರಿದಂತೆ ಬೀದರ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹದ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ನಾಲ್ಕೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ.
ಕಲ್ಬುರ್ಗಿ ಜಿಲ್ಲೆಯಲ್ಲಿ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲ್ಬುರ್ಗಿ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಕೃಷ್ಣ, ಭೀಮಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ: ತುರ್ತು ಪರಿಹಾರ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದು ಖಡಕ್ ಸೂಚನೆ
