ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ವರದಿ, ಶಿರಸಿ:
ಕೊರೋನಾ ಉಲ್ಬಣಿಸಿದರೆ ತಾಲೂಕಿನ ಎಲ್ಲ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗೆ ಚಿಂತಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ನಗರದ ಮಿನಿ ವಿಧಾನಸೌಧದಲ್ಲಿ ಶನಿವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಕೊರೋನಾ ನಿಯಂತ್ರಣ ಸಂಬಂಧ ಸಭೆ ನಡೆಸಿದ ಅವರು, ಜಿಲ್ಲೆ, ತಾಲೂಕುಗಳಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಿದೆ. ಜಿಲ್ಲೆಯಲ್ಲಿ ವೇಗವಾಗಿ ಕೊರೋನಾ ಹರಡುತ್ತಿದೆ. ಹೀಗಾಗಿ ಸರ್ಕಾರದ ಕಟ್ಟುನಿಟ್ಟಿನ ಕ್ರಮವನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ಕ್ರಮವಹಿಸಲಾಗಿದೆ. ಒಂದೊಮ್ಮೆ ಕೊರೋನಾ ಹೆಚ್ಚಿದರೆ ತಾಲೂಕಾ ಕೇಂದ್ರದ ಆಸ್ಪತ್ರೆಯ ಜತೆ ಎಲ್ಲ ಪ್ರಾಥಮಿಕ ಆರೋಗ್ಯ ವ್ಯವಸ್ಥೆಗೆ ಚಿಂತನೆ ನಡೆಸಲಾಗಿದೆ ಎಂದರು.
ಯಾರಿಗಾದರೂ ರೋಗ ಲಕ್ಷಣ ಕಂಡು ಬಂದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆಯಬೇಕು. ಪ್ರತಿಯೊಬ್ಬರೂ ಪರೀಕ್ಷೆ ಮಾಡಿಸಿಕೊಳ್ಳಬೇಕು.
ಸೋಂಕಿತರು ಸಾವಿನ ಭಯದಿಂದ ಹೊರಬರಬೇಕು. ಮಾನಸಿಕ ಕೀಳರಿಮೆ ಬಿಟ್ಟು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು.
ಪ್ರತೀ ಮನೆಯಲ್ಲಿಯೂ ಎಚ್ಚರಿಕೆ ವಹಿಸಬೇಕು ಎಂದ ಅವರು, ಖಾಸಗಿ ಕೋವಿಡ್ ಆಸ್ಪತ್ರೆಗಳಿಗೆ ಸರ್ಕಾರ ಸಹಕಾರ ನೀಡಲು ಸಿದ್ಧವಿದೆ. ಆದರೆ ಸರ್ಕಾರದ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಅವಕಾಶ ನೀಡಬೇಕು ಎಂದರೆ ಅದಕ್ಕೆ ಅವಕಾಶವಿಲ್ಲ. ಇಡೀ ರಾಜ್ಯಕ್ಕೇ ಸರ್ಕಾರದ ನಿಯಮ ಅನ್ವಯವಾಗುತ್ತದೆ. ಹಾಗಾಗಿ ಖಾಸಗಿ ಆಸ್ಪತ್ರೆಗಳ ಸಹಕಾರ ಅತ್ಯಗತ್ಯ. ಸರ್ಕಾರದ ನಿಯಮಾವಳಿಗಳನ್ನೂ ಪಾಲಿಸಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡುವುದು ಅನಿವಾರ್ಯ ಎಂದು ಹೇಳಿದರು.
ಎಲ್ಲ ಪಂಚಾಯಿತಿಗಳಲ್ಲೂ ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಿಕೊಳ್ಳಬೇಕು. ಕರೊನಾ ಪರೀಕ್ಷೆ, ಪಾಸಿಟಿವ್ ಪ್ರಕರಣಕ್ಕೆ ಸಂಬಂಧಿಸಿ ಈ ವಾಹನ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಈ ವೇಳೆ ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಡಿಎಸ್ಪಿ ರವಿ ನಾಯ್ಕ, ತಾಲೂಕಾ ಆರೋಗ್ಯಾಧಿಕಾರಿ ವಿನಾಯಕ ಭಟ್ಟ ಇತರರಿದ್ದರು.